ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ನಡೆಸಿದ 2026ನೇ ಸಾಲಿನ ಪರೀಕ್ಷೆ ಉತ್ತರ ಕನ್ನಡ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಿತು.

ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆದ ಮೊದಲ ಅವಧಿಯ ಪರೀಕ್ಷೆಗೆ 8,222 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 5,847 ಮಂದಿ ಹಾಜರಾಗಿದ್ದರು. 2,375 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.
ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ನಡೆದ ಎರಡನೇ ಅವಧಿಯ ಪರೀಕ್ಷೆಗೆ 8,223 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 5,824 ಮಂದಿ ಹಾಜರಾಗಿದ್ದಾರೆ. 2,399 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.
ಪರೀಕ್ಷೆಯ ವೇಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದ ಮಾರ್ಗಸೂಚಿಗಳು, ಗೌಪ್ಯತಾ ನಿಯಮಗಳು ಹಾಗೂ ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರು ತಿಳಿಸಿದರು.
ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್, ವೈದ್ಯಕೀಯ ಸೌಲಭ್ಯ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗಿತ್ತು.
ಜಿಲ್ಲಾ ಆಡಳಿತದ ಸಮನ್ವಯದಲ್ಲಿ ಪೊಲೀಸ್, ಶಿಕ್ಷಣ, ಆರೋಗ್ಯ, ಹೆಸ್ಕಾಂ, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕಾರ ನೀಡಿದರು. ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಎಲ್ಲ ಕೇಂದ್ರಗಳಿಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಉಪ ಮುಖ್ಯ ಅಧೀಕ್ಷಕರು ಮತ್ತು ವೀಕ್ಷಕರನ್ನು ನಿಯೋಜಿಸಲಾಗಿತ್ತು. ಅಂಕೋಲಾ ಹಾಗೂ ಕುಮಟಾದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಡಿಸಿ ಪರಿಶೀಲಿಸಿದರು.
ವಿವಿಧ ಇಲಾಖೆಗಳ ಸಮನ್ವಯ ಮತ್ತು ಅಧಿಕಾರಿಗಳು, ಸಿಬ್ಬಂದಿಯ ಸಹಕಾರದಿಂದ ಜಿಲ್ಲೆಯಾದ್ಯಂತ ಪರೀಕ್ಷೆಯನ್ನು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.
What do you feel about this post?
Like
Love
Happy
Haha
Sad




