ಮಂಗಳೂರು ದಸರಾಕ್ಕೆ ಕ್ಷಣಗಣನೆ: 12 ರಂದು ಸಿಎಂ ಡಿಕೆಶಿ ಚಾಲನೆ, 21ಕ್ಕೆ ಭವ್ಯ ಶೋಭಾಯಾತ್ರೆ: ಪದ್ಮರಾಜ ಪೂಜಾರಿ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಕರಾವಳಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಅ 11 ರಿಂದ 22 ರವರೆಗೆ ನಡೆವ ಮಹೋತ್ಸವಕ್ಕೆ ಭರದ ಸಿದ್ಧತೆಗಳು ಪೂರ್ಣಗೊಂಡಿದ್ದು, ಅ. 12 ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ನೀಡಲಿದ್ದಾರೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆವ ಮಂಗಳೂರು ದಸರಾ ಈ ಬಾರಿಯೂ ಭಕ್ತಿ, ಧಾರ್ಮಿಕ ಆಚರಣೆ, ಕಲೆ, ಸಂಸ್ಕೃತಿ ಹಾಗೂ ಜನಪದ ವೈಭವದ ಸಂಗಮವಾಗಿ ಮೂಡಿಬರಲಿದೆ ಎಂದರು.

ಅ.11ರಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಅಕ್ಟೋಬರ್ 11ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ ವಿಶೇಷ ಆಕರ್ಷಣೆಯಾಗಲಿದೆ ಎಂದು ತಿಳಿಸಿದರು.

ಅಕ್ಟೋಬರ್ 12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾಕ್ಕೆ ಅಧಿಕೃತ ಚಾಲನೆ ನೀಡಲಿದ್ದು, ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಐತಿಹಾಸಿಕ ಮಂಗಳೂರು ದಸರಾ ಶೋಭಾಯಾತ್ರೆ ಅಕ್ಟೋಬರ್ 21ರಂದು ಸಂಜೆ 4 ಗಂಟೆಗೆ ಆರಂಭವಾಗಲಿದೆ ಎಂದು ತಿಳಿಸಿದರು.

ಪ್ರತಿದಿನ ಚಂಡಿಕಾಹೋಮ

ಅಕ್ಟೋಬರ್ 12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8.30ಕ್ಕೆ ಶ್ರೀಕ್ಷೇತ್ರದಲ್ಲಿ ಚಂಡಿಕಾಹೋಮ ನಡೆಯಲಿದೆ. ಅಕ್ಟೋಬರ್ 17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ಆಯೋಜಿಸಲಾಗಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಸಾರ್ವಜನಿಕರೂ ಚಂಡಿಕಾಹೋಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

‘ದಸರಾ ಕಲಾಝೇಂಕಾರ’ದಲ್ಲಿ ಕಲಾ ವೈಭವ

ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಪ್ರತಿದಿನ ಮಧ್ಯಾಹ್ನ 2.30ರಿಂದ ರಾತ್ರಿ 11.30ರವರೆಗೆ ‘ದಸರಾ ಕಲಾಝೇಂಕಾರ’ ನಡೆಯಲಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಲಾವಿದರು ಸಂಗೀತ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ. ಇದೇ ವೇದಿಕೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಪ್ರತಿದಿನ ‘ಅಸಾಮಾನ್ಯ ಸ್ತ್ರೀ’ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು.

ಮಕ್ಕಳಿಂದ ಮಹಿಳೆಯರವರೆಗೆ ಹಲವು ಸ್ಪರ್ಧೆಗಳು

ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಕ್ಟೋಬರ್ 12ರಂದು ರಾಜ್ಯಮಟ್ಟದ ದಸರಾ ಕವಿಗೋಷ್ಠಿ, ಕಥೆ ಹಾಗೂ ಕವನ ಸ್ಪರ್ಧೆಗಳು ನಡೆಯಲಿವೆ. ಅಕ್ಟೋಬರ್ 13ರಂದು ಸಂಜೆ 7.30ರಿಂದ ‘ರುದ್ರತಾಂಡವಮ್’ ರಾಜ್ಯಮಟ್ಟದ ಭಕ್ತಿಪ್ರಧಾನ ಸಮೂಹ ನೃತ್ಯ ಸ್ಪರ್ಧೆ–2 ನಡೆಯಲಿದೆ ಎಂದರು.

ಅಕ್ಟೋಬರ್ 15ರಂದು ‘ಮಕ್ಕಳ ದಸರಾ’ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮಕ್ಕಳಿಗಾಗಿ ಭಕ್ತಿಗೀತೆ, ಚಿತ್ರಕಲೆ ಹಾಗೂ ದೇಶಭಕ್ತಿಗೀತೆ ಸ್ಪರ್ಧೆಗಳು ನಡೆಯಲಿವೆ. ಅ. 16ರಂದು ‘ಮುದ್ದು ಶಾರದೆ’ ಸ್ಪರ್ಧೆ, ಅಕ್ಟೋಬರ್ 18ರಂದು ದಸರಾ ಮ್ಯಾರಥಾನ್–4 ಹಾಗೂ ‘ಕಿನ್ನಿಪಿಲಿ’–2 ನಡೆಯಲಿದೆ ಎಂದರು.

ಅಕ್ಟೋಬರ್ 19ರಂದು ಮಹಿಳೆಯರಿಗಾಗಿ ‘ಮಹಿಳಾ ದಸರಾ’ ನಡೆಯಲಿದ್ದು, ಭರತನಾಟ್ಯ, ಬೆಂಕಿ ರಹಿತ ಅಡುಗೆ, ರಂಗೋಲಿ, ಮೆಹಂದಿ, ಸಮೂಹ ಗಾಯನ ಹಾಗೂ ಹೂ ಕಟ್ಟುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರಾತ್ರಿ 8 ಗಂಟೆಗೆ ಮಹಿಳೆಯರಿಂದ ಸಮೂಹ ಗರ್ಭಾ ದಾಂಡಿಯಾ ನೃತ್ಯ ನಡೆಯಲಿದೆ. ಅ. 20ರಂದು ‘ದಸರಾ ರಂಗಾಂತರಂಗ’ ಹೆಸರಿನಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು.

ಶಾರದಾ ಮಾತೆಯ ಮಡಿಲಲ್ಲಿ ಅಕ್ಷರಾಭ್ಯಾಸ

ಅಕ್ಟೋಬರ್ 20ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶಾರದಾ ಮಾತೆಯ ಮಡಿಲಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು. ಬಾರಿಯ ಮಂಗಳೂರು ದಸರಾದ ಮತ್ತೊಂದು ವಿಶೇಷವೆಂದರೆ ಶ್ರೀಕ್ಷೇತ್ರದ ಭವ್ಯ ದರ್ಬಾರ್ ಮಂಟಪದ ವಿನ್ಯಾಸ. ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ ನಡೆಯಲಿರುವ ಮಂಟಪವನ್ನು ಈ ಬಾರಿ ಅರಮನೆ ಶೈಲಿಯಲ್ಲಿ ಮನಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದರು.

ಹೀಗಾಗಿ ಧಾರ್ಮಿಕ ಆಚರಣೆಗಳ ಜತೆಗೆ ಸಂಗೀತ, ನೃತ್ಯ, ಕಲೆ, ಸಾಹಿತ್ಯ, ಕ್ರೀಡೆ, ಮಕ್ಕಳ ಹಾಗೂ ಮಹಿಳೆಯರ ಕಾರ್ಯಕ್ರಮಗಳ ಮೂಲಕ ಮಂಗಳೂರು ದಸರಾ ಕರಾವಳಿಯ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಅನಾವರಣಗೊಳಿಸಲು ಸಜ್ಜಾಗಿದೆ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಜಯರಾಜ್ ಸೋಮಸುಂದರ್ ಸ್ವಾಗತಿಸಿದರು.

ಟ್ರಸ್ಟಿ ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ಚಿತ್ತರಂಜನ್ ಗರೋಡಿ, ಹರಿಕೃಷ್ಣ ಬಂಟ್ವಾಳ್, ಚಂದನ್‌ದಾಸ್, ರಾಧಾಕೃಷ್ಣ, ಲೀಲಾಕ್ಷ ಕರ್ಕೇರ, ಜತಿನ್ ಅತ್ತಾವರ, ವಾಸುದೇವ ಕೋಟ್ಯಾನ್, ಲತೀಶ್ ಸುವರ್ಣ, ಪ್ರವೀಣ್ ದಂಡೆಕೇರಿ ಇದ್ದರು.

Leave a Reply

Your email address will not be published. Required fields are marked *