ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರ ಪೀಠ ಸ್ಥಾಪನೆ ಕುರಿತು ದಸರಾ ಮುಗಿದ ಬಳಿಕ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಜತೆಗೆ ಸಭೆ ವಿಶೇಷ ಸಭೆ ನಡೆಸಲಾಗುತ್ತದೆ. ಪೀಠ ಸ್ಥಾಪನೆಯಿಂದ ಬೆಂಗಳೂರಿಗೆ ತೆರಳುವ ಹೊರೆ ಕಡಿಮೆ ಆಗುವ ಜತೆಗೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೂ ಸಹಕಾರಿ ಆಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಹೇಳಿದರು.
ಭಾನುವಾರ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಬೇಡಿಕೆಯನ್ನು ಸಾಕಾರಗೊಳಿಸಲು ಸಂಘಟಿತ ಪ್ರಯತ್ನ ಅಗತ್ಯವಿದೆ. ಹೈಕೋರ್ಟ್ ಪೀಠ ಸ್ಥಾಪನೆಯಿಂದ ನ್ಯಾಯಾಲಯದ ಕೆಲಸಗಳಿಗೆ ಬೆಂಗಳೂರು ತೆರಳುವ ಜನರ ಸಮಯ ಮತ್ತು ವೆಚ್ಚ ಉಳಿತಾಯವಾಗಲಿದೆ. ಜತೆಗೆ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದರು.
ಹೈಕೋರ್ಟ್ ಪೀಠ ಸ್ಥಾಪನೆಯ ಸಾಧ್ಯತೆಗಳ ಪರಿಶೀಲನೆಗಾಗಿ ಮುಖ್ಯ ನ್ಯಾಯಮೂರ್ತಿಗಳಿಂದ ರಚನೆಯಾದ ನ್ಯಾಯಮೂರ್ತಿಗಳ ಸಮಿತಿ ಮಂಗಳೂರಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿ, ಮಂಗಳೂರಿನಲ್ಲಿ ಪೀಠ ಸ್ಥಾಪನೆಯ ಅಗತ್ಯವನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಯಲಿದೆ ಎಂದರು.
ಮಂಗಳೂರಿನಲ್ಲಿ ವಿಮಾನ, ರೈಲು ಮತ್ತು ಬಸ್ ಸಂಪರ್ಕ ವ್ಯವಸ್ಥೆ ಉತ್ತಮವಾಗಿರುವುದು ಪೀಠ ಸ್ಥಾಪನೆಗೆ ಪೂರಕವಾಗಿದೆ. ಆದರೆ, ಈ ಪ್ರಸ್ತಾವನೆಗೆ ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳ ಸಹಮತವನ್ನೂ ಪಡೆದುಕೊಳ್ಳಬೇಕಿದೆ ಎಂದರು.
ಸಮಿತಿ ರಚನೆ
ಹೈಕೋರ್ಟ್ ಪೀಠ ಸ್ಥಾಪನೆಯ ಪರಿಶೀಲನೆಗಾಗಿ ನ್ಯಾಯಮೂರ್ತಿಗಳ ಸಮಿತಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿಗಳನ್ನು ವ್ಯವಸ್ಥಿತವಾಗಿ ಒದಗಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಮಿತಿ ರಚಿಸಲಾಗುವುದು. ಜಿಲ್ಲೆಯ ವಕೀಲರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮಿತಿಗೆ ಅಗತ್ಯ ಮಾಹಿತಿ ನೀಡಿ, ಮಂಗಳೂರಿನಲ್ಲಿ ಪೀಠ ಸ್ಥಾಪನೆಯ ಅಗತ್ಯವನ್ನು ಮನವರಿಕೆ ಮಾಡಿಕೊಡಬೇಕು. ಈ ಮೂಲಕ ಬೇಡಿಕೆಗೆ ಬಲ ತುಂಬಿ, ಪೀಠ ಸ್ಥಾಪನೆಗೆ ವೇಗ ನೀಡಬೇಕು ಎಂದರು.
ಶಾಸಕ ರಾಜೇಶ್ ನಾಯ್ಕ ಉಳಿಪಾಡಿ ಮಾತನಾಡಿ, ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಅಗತ್ಯವಿದೆ. ಇದರಿಂದ ನ್ಯಾಯಕ್ಕಾಗಿ ಬೆಂಗಳೂರಿಗೆ ತೆರಳಬೇಕಾದ ಜನರಿಗೆ ಅನುಕೂಲವಾಗಲಿದೆ ಎಂದರು.
ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕಾದರೆ ಕೇವಲ ಎರಡು ಜಿಲ್ಲೆಗಳ ಬೆಂಬಲ ಸಾಕಾಗುವುದಿಲ್ಲ. ನಾಲ್ಕು ಜಿಲ್ಲೆಗಳ ಸಹಕಾರ ಮತ್ತು ಒಮ್ಮತ ಅಗತ್ಯವಿದೆ. ಈ ವಿಚಾರದಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಮಂಗಳೂರು ವಿವಿಕುಲಪತಿ ಪ್ರೊ. ಪಿ.ಎಲ್. ಧರ್ಮ ಮಾತನಾಡಿ, ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಯ ಕುರಿತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳ ಮೂಲಕ ಅಂಚೆ ಕಾರ್ಡ್ ಅಭಿಯಾನ ನಡೆಸಲು ಸುತ್ತೋಲೆ ಹೊರಡಿಸುವೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದ ಹೈಕೋರ್ಟ್‌ನಲ್ಲಿ ವಿಚಾರಣೆಯಾಗಬೇಕಿರುವ ಪ್ರಕರಣಗಳ ವಿಲೇವಾರಿಗೆ ದೀರ್ಘಕಾಲ ಬೇಕಾಗುತ್ತಿದೆ. ಪ್ರತಿ ವರ್ಷ 3,000ರಿಂದ 4,000 ಪ್ರಕರಣಗಳು ಇತ್ಯರ್ಥವಾದರೂ ಹೊಸದಾಗಿ ಸುಮಾರು 6,000 ಪ್ರಕರಣಗಳು ಸೇರ್ಪಡೆಯಾಗುತ್ತಿವೆ. ಮಂಗಳೂರಿನಲ್ಲಿ ಪೀಠ ಸ್ಥಾಪನೆಯಾದರೆ ನ್ಯಾಯಮೂರ್ತಿಗಳ ಲಭ್ಯತೆ ಹೆಚ್ಚಿ, ಪ್ರಕರಣಗಳ ತ್ವರಿತ ವಿಲೇವಾರಿಗೆ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ರಾಜ್ಯಸಭಾ ಸದಸ್ಯರು, ಹಿರಿಯ ವಕೀಲರಾದ ಓ.ಟಿ. ಭಟ್, ಎಂ.ಪಿ. ದೊರಣ್ಣ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಹಲವು ಗಣ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಅರುಣ್ ಕುಮಾರ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ಮೂಡಾ ಅಧ್ಯಕ್ಷ ಸಂತೋಷಕುಮಾರ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಇದ್ದರು.
13 ವರ್ಷಗಳಿಂದ ಹೋರಾಟ
ದ.ಕ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಕಳೆದ 13 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಲ್ಲಿ ಹೈಕೋರ್ಟ್ ಪೀಠಗಳು ಸ್ಥಾಪನೆಯಾದ ಬಳಿಕ ಮಂಗಳೂರಿನಲ್ಲೂ ಪೀಠ ಸ್ಥಾಪಿಸಬೇಕೆಂಬ ಬೇಡಿಕೆ ತೀವ್ರಗೊಂಡಿದೆ. ಮುಖ್ಯ ನ್ಯಾಯಮೂರ್ತಿಗಳಿಂದ ರಚನೆಯಾದ ಸಮಿತಿ ಜಿಲ್ಲೆಗೆ ಭೇಟಿ ನೀಡಿರುವುದರಿಂದ ಈ ಬೇಡಿಕೆಗೆ ಮತ್ತಷ್ಟು ಬಲ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.


