ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿರೇಕದ ವರ್ತನೆ ತೋರಿದ್ದಾರೆ. ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗುವುದು ಅಪರಾಧವೇ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಸರಾ ಸಂಭ್ರಮದ ಅವಧಿಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿದ್ದ ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯರು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿ ಗೊಂದಲ ಬಗೆಹರಿಸುವಂತೆ ಮನವಿ ಮಾಡಿದ್ದೆ. ಸಮಸ್ಯೆ ಸುಸೂತ್ರವಾಗಿ ಪರಿಹಾರವಾಗುವ ಹಂತದಲ್ಲಿದ್ದಾಗ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆದುಕೊಂಡ ರೀತಿ ಖಂಡನೀಯ ಎಂದರು.
ಕ್ರಿಸ್ಮಸ್ ಹಿನ್ನೆಲೆಯಲ್ಲಿ ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ 140ಕ್ಕೂ ಹೆಚ್ಚು ಕಾಲೇಜುಗಳ ಪರೀಕ್ಷೆ ಮುಂದೂಡಲಾಗಿತ್ತು. ಅದೇ ಮಾದರಿಯಲ್ಲಿ ದಸರಾ ಹಬ್ಬದ ಮರುದಿನದ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಕುಟುಂಬದೊಂದಿಗೆ ಹಬ್ಬ ಆಚರಿಸಲು ಬಯಸಿದ್ದ ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದರು ಎಂದರು.
ಪ್ರತಿಭಟನಾಕಾರರನ್ನು ಪೊಲೀಸರು ಕುತ್ತಿಗೆಪಟ್ಟಿ ಹಿಡಿದು ಎಳೆದೊಯ್ದಿರುವುದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಗಂಭೀರವಾಗಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ನಿಯಂತ್ರಿಸಲು ಮಹಿಳಾ ಪೊಲೀಸರ ಬದಲು ಪುರುಷ ಪೊಲೀಸರನ್ನು ಬಳಸಿರುವುದೂ ಸರಿಯಲ್ಲ. ವಿದ್ಯಾರ್ಥಿಗಳು ಕಲ್ಲು ತೂರಾಟ ಅಥವಾ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡದಿದ್ದರೂ ಹಲ್ಲೆ ನಡೆಸಲು ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದರು.
ವಿದ್ಯಾರ್ಥಿಗಳನ್ನು ಬಂಧಿಸಿರುವ ವಿಷಯ ತಿಳಿದು ಪೊಲೀಸ್ ಠಾಣೆಗೆ ತೆರಳಿ ಅವರ ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಬಿಡುಗಡೆಗೊಳಿಸಲು ಪ್ರಯತ್ನಿಸಿದ್ದಾಗಿ ತಿಳಿಸಿದರು. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಹಿಂದೆ ಕಾಂಗ್ರೆಸ್ ನಾಯಕರ ಒತ್ತಡವಿದೆ ಎಂಬ ಆರೋಪಗಳೂ ಕೇಳಿಬಂದಿವೆ ಎಂದು ಹೇಳಿದರು.
ಹಬ್ಬಗಳ ಸಂದರ್ಭದಲ್ಲಿ ಪರೀಕ್ಷೆ ನಡೆಸದಂತೆ ರಾಜ್ಯ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೊಲೀಸರನ್ನು ಅಮಾನತುಗೊಳಿಸಬೇಕು. ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಮತ್ತು ಲಲೇಶ್ ಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮನೋಹರ್ ಕದ್ರಿ, ನಿಶಾಂತ್ ಪೂಜಾರಿ, ವರುಣ್ ರಾಜ್ ಅಂಬಟ್, ಋತ್ವಿಕ್ ಕದ್ರಿ, ರಾಜೇಂದ್ರ ಶೆಟ್ಟಿ ಹಾಗೂ ಭಾಸ್ಕರ ಚಂದ್ರ ಶೆಟ್ಟಿ ಇದ್ದರು.



