ಕಾರವಾರ: ಭಾರತದ ರಕ್ಷಣಾ ಸ್ವಾವಲಂಬನೆಯ ಪಯಣಕ್ಕೆ ಮತ್ತೊಂದು ಬಲ ದೊರೆತಿದ್ದು, ಭಾರತೀಯ ನೌಕಾಪಡೆಯ ಮೊದಲ ಸ್ವದೇಶಿ ನಿರ್ಮಿತ ಬಹುಉದ್ದೇಶದ ನೌಕೆ ಐಎನ್ಎಸ್ ಸಮರ್ಥಕ್ ಅನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶುಕ್ರವಾರ ಕಾರವಾರದಲ್ಲಿ ನೌಕಾಪಡೆಗೆ ಸೇರ್ಪಡೆಗೊಳಿಸಿದರು.
ಶೇ.75ಕ್ಕೂ ಅಧಿಕ ಸ್ವದೇಶಿ ಘಟಕಗಳನ್ನು ಹೊಂದಿರುವ ಈ ನೌಕೆಯ ಸೇರ್ಪಡೆಯು ದೇಶದ ತಾಂತ್ರಿಕ ಪರಿಣತಿ, ಕೈಗಾರಿಕಾ ಸಾಮರ್ಥ್ಯ ಮತ್ತು ಹಡಗು ನಿರ್ಮಾಣ ಕ್ಷೇತ್ರದ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಈಗ ಆಶಯವಾಗಿ ಉಳಿದಿಲ್ಲ; ಅದು ವಾಸ್ತವವಾಗಿ ಸಾಕಾರಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಮತ್ತು ಆತ್ಮನಿರ್ಭರ ಭಾರತ ಪರಿಕಲ್ಪನೆಗೆ ಇದು ಬಲ ನೀಡಿದೆ ಎಂದು ಉಪರಾಷ್ಟ್ರಪತಿ ಹೇಳಿದರು.
ಭಾರತದ ಸಮೃದ್ಧ ಸಮುದ್ರ ಪರಂಪರೆಯನ್ನು ಸ್ಮರಿಸಿದ ಅವರು, ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಚೋಳರ ನೌಕಾ ಪರಂಪರೆಯು ಹಿಂದೂ ಮಹಾಸಾಗರ ಹಾಗೂ ಆಗ್ನೇಯ ಏಷ್ಯಾದಲ್ಲಿ ಭಾರತದ ಸಮುದ್ರ ಪ್ರಭಾವವನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂದರು.
ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ, ಭಾರತೀಯರ ಸ್ಥಳಾಂತರ, ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಕಾರ್ಯಗಳಲ್ಲಿ ಭಾರತೀಯ ನೌಕಾಪಡೆ ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು.

ಐಎನ್ಎಸ್ ಸಮರ್ಥಕ್ ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ಸಂವೇದಕಗಳು ಹಾಗೂ ನೂತನ ತಂತ್ರಜ್ಞಾನಗಳ ಪರೀಕ್ಷೆ ಮತ್ತು ಮೌಲ್ಯಮಾಪನಕ್ಕೆ ವೇದಿಕೆಯಾಗಲಿದೆ. ಸಮುದ್ರ ಕಣ್ಗಾವಲು, ವಿಚಕ್ಷಣ, ಗಸ್ತು, ಮಾನವರಹಿತ ವ್ಯವಸ್ಥೆಗಳ ಕಾರ್ಯಾಚರಣೆ ಮತ್ತು ವಿಪತ್ತು ಪರಿಹಾರ ಕಾರ್ಯಗಳಿಗೂ ಈ ನೌಕೆಯನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರವಾರದ ಆಳವಾದ ನೈಸರ್ಗಿಕ ಬಂದರು ಮತ್ತು ಅರಬ್ಬಿ ಸಮುದ್ರದ ಸಾಮೀಪ್ಯವು ಭಾರತದ ಸಮುದ್ರ ಭದ್ರತೆಯಲ್ಲಿ ಈ ಪ್ರದೇಶಕ್ಕೆ ವಿಶೇಷ ಮಹತ್ವ ನೀಡಿದೆ. ‘ಸೀಬರ್ಡ್’ ಯೋಜನೆಯಡಿ ಆಧುನಿಕ ನೌಕಾ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತಿದ್ದು, ಹೆಚ್ಚಿನ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ನೆಲೆಗೊಳಿಸಲು ಅನುಕೂಲವಾಗಲಿದೆ. ಇದರಿಂದ ಸ್ಥಳೀಯ ಆರ್ಥಿಕ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದರು.
ನೌಕೆಯ ನಿರ್ಮಾಣಕ್ಕೆ ಕೊಡುಗೆ ನೀಡಿದ ಎಲ್ ಆ್ಯಂಡ್ ಟಿ ಸಂಸ್ಥೆ ಹಾಗೂ ಎಂಜಿನಿಯರ್ಗಳು, ತಂತ್ರಜ್ಞರು ಮತ್ತು ಇತರ ಸಿಬ್ಬಂದಿಯ ಕಾರ್ಯವನ್ನು ಉಪರಾಷ್ಟ್ರಪತಿ ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್, ವೈಸ್ ಅಡ್ಮಿರಲ್ ಸಂಜಯ್ ವತ್ಸಾಯನ್, ವೈಸ್ ಅಡ್ಮಿರಲ್ ಸಂಜಯ್ ಸಾಧು, ರಿಯರ್ ಅಡ್ಮಿರಲ್ ವಿಕ್ರಮ್ ಮೆನನ್, ನಿವೃತ್ತ ರಿಯರ್ ಅಡ್ಮಿರಲ್ ಜಿ.ಕೆ. ಹರೀಶ್, ನೌಕೆಯ ಕಮಾಂಡಿಂಗ್ ಅಧಿಕಾರಿ ಕಮಾಂಡರ್ ಸುಶೀಲ್ ಕುಮಾರ್ ಸಿಂಗ್ ಸೇರಿದಂತೆ ನೌಕಾಪಡೆ ಮತ್ತು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಇದ್ದರು.



