ಬನವಾಸಿಯಲ್ಲಿ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಚಿರತೆಯ 10 ಉಗುರು ವಶ, ವ್ಯಕ್ತಿ ಬಂಧನ

ಅಪರಾಧ ಕಾರವಾರ ಜಿಲ್ಲಾ ಸುದ್ದಿ ಶಿರಸಿ

Spread the love

ಬನವಾಸಿ: ಮನೆಯೊಂದರಲ್ಲಿ ಚಿರತೆಯ 10 ಉಗುರುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಸಮೀಪದ ಕಲ್ಲಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಲ್ಲಿ ಗ್ರಾಮದ ಅರಣ್ಯ ಸರ್ವೆ ಸಂಖ್ಯೆ 80 ರ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಚಿರತೆಯ ಉಗುರುಗಳನ್ನು ಅನಧಿಕೃತವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಚಿರತೆಯ 10 ಉಗುರುಗಳು ಪತ್ತೆಯಾಗಿವೆ ಎಂದು ಅರಣ್ಯ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಂಬಳೆಕೊಪ್ಪ ಗ್ರಾಮದ ಲಕ್ಷ್ಮಣ ಶೇಷಪ್ಪ ನಾಯ್ಕ (36) ಅವರನ್ನು ಬಂಧಿಸಲಾಗಿದ್ದು, ಬಳಿಕ ಸಿರಸಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಸೆಕ್ಷನ್ 9 ಮತ್ತು 39 ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳ ಉಲ್ಲಂಘನೆಯ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ವನ್ಯಜೀವಿಗಳ ಅಂಗಾಂಗಗಳನ್ನು ಅಕ್ರಮವಾಗಿ ಸಂಗ್ರಹಿಸುವುದು ಹಾಗೂ ಅವುಗಳ ವ್ಯಾಪಾರಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ವಶಪಡಿಸಿಕೊಂಡಿರುವ ಚಿರತೆಯ ಉಗುರುಗಳ ಮೂಲ ಯಾವುದು ಮತ್ತು ಅವುಗಳನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಿಡಲಾಗಿತ್ತು ಎಂಬ ಬಗ್ಗೆ ಮುಂದಿನ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *