ಕಾರವಾರ: 2027ರ ಜನಗಣತಿಯ ಎರಡನೇ ಹಂತದ ಕಾರ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಿದ್ದು, ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಜವಾಬ್ದಾರಿಯಿಂದ ಕಾರ್ಯ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸೂಚಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಚಾರ್ಜ್ ಅಧಿಕಾರಿಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2027ರ ಜನವರಿ 25ರಿಂದ ಮನೆಮನೆ ಗಣತಿ ಕಾರ್ಯ ಆರಂಭವಾಗಲಿದೆ. ಇದಕ್ಕೂ ಮುನ್ನ ಸಾರ್ವಜನಿಕರಿಗೆ ಸ್ವಯಂ ಗಣತಿಗೆ ಅವಕಾಶ ಕಲ್ಪಿಸಲಾಗಿದೆ. ಜನವರಿ 10ರಿಂದ 24ರವರೆಗೆ 15 ದಿನಗಳ ಕಾಲ ಸಾರ್ವಜನಿಕರು ತಮ್ಮ ಕುಟುಂಬ ಹಾಗೂ ಮನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸ್ವತಃ ದಾಖಲಿಸಿಕೊಳ್ಳಬಹುದು.
ಜನವರಿ 25ರಿಂದ ಫೆಬ್ರವರಿ 28ರವರೆಗೆ ಗಣತಿದಾರರು ಮನೆಮನೆಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಜನಗಣತಿಯು ದೇಶದ ಭವಿಷ್ಯದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಮಹತ್ವದ ಆಧಾರವಾಗಿರುವುದರಿಂದ ಮಾಹಿತಿಯನ್ನು ನಿಖರವಾಗಿ ಮತ್ತು ಸಮಗ್ರವಾಗಿ ದಾಖಲಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶ ನೀಡದೆ ನಿಗದಿತ ವೇಳಾಪಟ್ಟಿಯಂತೆ ಗಣತಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು, ತರಬೇತುದಾರರು ಮತ್ತಿತರರು ಇದ್ದರು.



