ಸಿರಸಿ: ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಬ್ಯಾಂಕುಗಳ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು.
ಶಿರಸಿಯಲ್ಲಿ ಮಂಗಳವಾರ ನಡೆದ ಬೃಹತ್ ಸಾಲ ಜಾಗೃತಿ ಮೇಳ ಹಾಗೂ ಆರ್ಥಿಕ ಸಾಕ್ಷರತೆ ಮತ್ತು ಹಣಕಾಸು ಸೇರ್ಪಡೆ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಬ್ಯಾಂಕುಗಳ ಮೂಲಕ ವಿವಿಧ ಸಾಲ ಸೌಲಭ್ಯ ಹಾಗೂ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ಇವುಗಳ ಬಗ್ಗೆ ಸಾರ್ವಜನಿಕರು ಮಾಹಿತಿ ಪಡೆದು, ಅರ್ಹತೆಗೆ ಅನುಗುಣವಾಗಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಇದರಿಂದ ಸ್ವಯಂ ಉದ್ಯೋಗಕ್ಕೆ ಉತ್ತೇಜನ ದೊರೆಯುವುದರ ಜತೆಗೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ಅರಿವು ಮೂಡಿಸುವುದು, ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಅರ್ಹರಿಗೆ ತಲುಪಿಸುವುದು ಹಾಗೂ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವುದು ಮೇಳದ ಪ್ರಮುಖ ಉದ್ದೇಶವಾಗಿದೆ. ಸರ್ಕಾರ ಮತ್ತು ಜನಸಾಮಾನ್ಯರ ನಡುವಿನ ಪ್ರಮುಖ ಕೊಂಡಿಯಾಗಿ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿದ್ದು, ಯೋಜನೆಗಳ ಅನುಷ್ಠಾನದಲ್ಲಿ ಅವುಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಲೀಡ್ ಜಿಲ್ಲಾ ವ್ಯವಸ್ಥಾಪಕ ರಾಜಪ್ಪ ಗೌಳಿ ಮಾತನಾಡಿ, ರೈತರು, ಸಣ್ಣ ವ್ಯಾಪಾರಿಗಳು, ಸ್ವಯಂ ಉದ್ಯೋಗಾಕಾಂಕ್ಷಿಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ವಿವಿಧ ಬ್ಯಾಂಕ್ ಸಾಲ ಸೌಲಭ್ಯಗಳು ಮತ್ತು ಸರ್ಕಾರಿ ಪ್ರಾಯೋಜಿತ ಯೋಜನೆಗಳ ಕುರಿತು ನೇರ ಮಾಹಿತಿ ಒದಗಿಸುವುದು ಮೇಳದ ಉದ್ದೇಶವಾಗಿದೆ ಎಂದರು.
ಭಾರತೀಯ ರಿಸರ್ವ್ ಬ್ಯಾಂಕ್ನ ಲೀಡ್ ಜಿಲ್ಲಾ ಅಧಿಕಾರಿ ಮೋನಿರಾಜ್ ಬ್ರಹ್ಮ ಮಾತನಾಡಿ, ಪ್ರತಿಯೊಬ್ಬ ಗ್ರಾಹಕರಿಗೂ ಗುಣಮಟ್ಟದ ಬ್ಯಾಂಕಿಂಗ್ ಸೇವೆ ಒದಗಿಸುವುದು ಬ್ಯಾಂಕುಗಳ ಕರ್ತವ್ಯ. ಸಾರ್ವಜನಿಕರು ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಅರಿವು ಬೆಳೆಸಿಕೊಂಡು ಸುರಕ್ಷಿತ ಹಣಕಾಸು ವ್ಯವಹಾರ ನಡೆಸಬೇಕು ಎಂದು ಹೇಳಿದರು.
ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಲೋಕೇಶ್ ಆರ್. ಮಾತನಾಡಿ, ಬ್ಯಾಂಕ್ ಸಾಲವನ್ನು ಕೃಷಿ, ಸಣ್ಣ ಉದ್ಯಮ, ವ್ಯಾಪಾರ ಹಾಗೂ ಸ್ವಯಂ ಉದ್ಯೋಗದಂತಹ ಉದ್ದೇಶಗಳಿಗೆ ಬಳಸಿಕೊಂಡು ಜೀವನಮಟ್ಟ ಸುಧಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕುಗಳ ಅಧಿಕಾರಿಗಳು, ಸಿಬ್ಬಂದಿ, ಎನ್ಆರ್ಎಲ್ಎಂ ಸಿಬ್ಬಂದಿ, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ರೈತರು, ಉದ್ಯಮಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಮೇಳದಲ್ಲಿ ಬ್ಯಾಂಕ್ ಸಾಲ ಸೌಲಭ್ಯಗಳು, ಸರ್ಕಾರಿ ಯೋಜನೆಗಳು ಮತ್ತು ಸ್ವಯಂ ಉದ್ಯೋಗಕ್ಕೆ ದೊರೆಯುವ ಆರ್ಥಿಕ ನೆರವಿನ ಕುರಿತು ಮಾಹಿತಿ ನೀಡಲಾಯಿತು.



