ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, 7 ರವರೆಗೆ ನಿರ್ಬಂಧ: ಜಿಲ್ಲಾಧಿಕಾರಿ ಸ್ವರೂಪ ಆದೇಶ

ಜಿಲ್ಲಾ ಸುದ್ದಿ ಉಡುಪಿ ಕುಂದಾಪುರ ರಾಜ್ಯ

Spread the love

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಉಡುಪಿ ತಾಲೂಕಿನ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 7ರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ನವೆಂಬರ್ 3ರಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಧರಣಿ, ಪ್ರತಿಭಟನೆ, ಮೆರವಣಿಗೆ ಹಾಗೂ ಅನಿರ್ದಿಷ್ಟಾವಧಿ ಮುಷ್ಕರಗಳನ್ನು ನಡೆಸುವಂತಿಲ್ಲ. ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳಿಗೆ ವಿನಾಯಿತಿ ನೀಡಲಾಗಿದೆ. ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನೂ ನಿರ್ಬಂಧಿಸಲಾಗಿದೆ.

ಅಲ್ಲದೆ, ಶಸ್ತ್ರಾಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಬಂದೂಕು, ಚೂರಿ, ಲಾಠಿ ಸೇರಿದಂತೆ ಅಪಾಯ ಉಂಟುಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದು ಮತ್ತು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಕಲ್ಲು, ಸ್ಫೋಟಕ, ದಾಹಕ ಹಾಗೂ ಇತರ ಅಪಾಯಕಾರಿ ವಸ್ತುಗಳನ್ನು ಸಂಗ್ರಹಿಸುವುದು ಮತ್ತು ಸಾಗಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಮನುಷ್ಯರ ಶವ ಅಥವಾ ಅವುಗಳ ಪ್ರತಿಕೃತಿಗಳ ಪ್ರದರ್ಶನ ಹಾಗೂ ದಹನ, ಧ್ವನಿವರ್ಧಕ ಬಳಕೆ, ಪ್ರಚೋದನಕಾರಿ ಘೋಷಣೆ, ಹಾಡು, ಕೂಗಾಟ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಚಟುವಟಿಕೆಗಳಿಗೂ ಅವಕಾಶವಿರುವುದಿಲ್ಲ. ವ್ಯಕ್ತಿಗಳ ತೇಜೋವಧೆ ಮಾಡುವ ಚಿತ್ರಗಳು, ಚಿಹ್ನೆಗಳು ಹಾಗೂ ಪ್ರತಿಕೃತಿಗಳನ್ನು ಪ್ರದರ್ಶಿಸುವುದನ್ನೂ ನಿಷೇಧಿಸಲಾಗಿದೆ.

ನಿಷೇಧಾಜ್ಞೆ ಉಲ್ಲಂಘಿಸಿ ಮಾರಕಾಸ್ತ್ರ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದಿರುವುದು ಕಂಡುಬಂದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *