ಎಸ್‌ಐಆರ್ ಅಕ್ರಮ ಆರೋಪ ದಾಖಲೆ ಸಮೇತ ಸಾಬೀತುಪಡಿಸಿ: ಶಾಸಕ ವೇದವ್ಯಾಸ್ ಕಾಮತ್ ಸವಾಲು

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ

Spread the love

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರು, ಆರೋಪಕ್ಕೆ ಪೂರಕವಾದ ದಾಖಲೆಗಳನ್ನು ಒದಗಿಸಲಿ. ಕರ್ನಾಟಕದಲ್ಲಿ ಎಎಸ್‌ಡಿಡಿ (ಗೈರು, ಸ್ಥಳಾಂತರ, ಮೃತಪಟ್ಟವರು ಹಾಗೂ ದ್ವಿಪ್ರತಿ) ಎಂದು ಗುರುತಿಸಿರುವ 99 ಲಕ್ಷ ಮತದಾರರ ಪೈಕಿ ಕೇವಲ 9 ಲಕ್ಷ ಮಂದಿಯನ್ನಾದರೂ ಕರೆತಂದು ನಿಯಮಾನುಸಾರ ಅರ್ಜಿ ಸಲ್ಲಿಸಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ ಸವಾಲು ಹಾಕಿದರು.

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೂ ಯಾವುದೇ ಜಾತಿ, ಮತ, ಧರ್ಮದ ಒಬ್ಬನೇ ಒಬ್ಬ ಮತದಾರರ ಹೆಸರನ್ನು ಅಕ್ರಮವಾಗಿ ಅಳಿಸಿದ್ದರೆ ದಾಖಲೆಗಳೊಂದಿಗೆ ಕರೆತರಲಿ. ಅಂತಹ ಪ್ರಕರಣ ಇಲ್ಲದಿದ್ದರೆ ಸುಳ್ಳು ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶೇ 99ರಷ್ಟು ಕೆಲಸವನ್ನು ರಾಜ್ಯ ಸರ್ಕಾರದ ಕಂದಾಯ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೇ ನಿರ್ವಹಿಸುತ್ತಾರೆ. ಎಲ್ಲ ರಾಜಕೀಯ ಪಕ್ಷಗಳ ಬಿಎಲ್‌ಎ-1 ಮತ್ತು ಬಿಎಲ್‌ಎ-2 ಪ್ರತಿನಿಧಿಗಳ ಉಪಸ್ಥಿತಿ ಹಾಗೂ ಸಹಕಾರದೊಂದಿಗೆ ಪ್ರಕ್ರಿಯೆ ನಡೆಯುತ್ತದೆ. ಹೀಗಿರುವಾಗ ರಾಜ್ಯದ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸುವ ಬದಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದಾಗ ಚುನಾವಣಾ ಆಯೋಗದ ಕಾರ್ಯವೈಖರಿ ಸರಿಯಾಗಿತ್ತು. ಸೋಲು ಕಂಡಾಗ ಮಾತ್ರ ಆಯೋಗದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ. ಕೇರಳದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿರುವುದರಿಂದಲೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಅಲ್ಲಿನ ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿ ನಡೆದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಸ್ವತಂತ್ರ ಭಾರತದ ಮೊದಲ ಪ್ರಧಾನಿ ಆಯ್ಕೆಯ ಸಂದರ್ಭದಲ್ಲಿಯೇ ಕಾಂಗ್ರೆಸ್ ಜನಾಭಿಪ್ರಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿತ್ತು ಎಂದು ಆರೋಪಿಸಿದ ಅವರು, ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಪ್ರಯತ್ನ ಸಂವಿಧಾನಕ್ಕೆ ಮಾಡಿದ ದ್ರೋಹ. ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೆ ಕಾಂಗ್ರೆಸ್ ಹತಾಶಗೊಂಡಿದೆ. ಚುನಾವಣಾ ಆಯೋಗ ಮತ್ತು ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದದ್ದಲ್ಲ. ದೇಶದಲ್ಲಿ ಈಗಾಗಲೇ 12 ಬಾರಿ ಈ ಪ್ರಕ್ರಿಯೆ ನಡೆದಿದೆ. ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ನಿಯಮಾನುಸಾರ ಪರಿಷ್ಕರಣೆ ಮಾಡಲಾಗುತ್ತದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಇದೇ ಪ್ರಕ್ರಿಯೆ ನಡೆದಾಗ ಒಪ್ಪಿಕೊಂಡು, ಬಿಜೆಪಿ ಅಧಿಕಾರದಲ್ಲಿರುವಾಗ ವಿರೋಧಿಸುತ್ತಿರುವುದು ದ್ವಂದ್ವ ನಿಲುವು ಎಂದು ಟೀಕಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ ಎಂ., ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದೀಪಕ್ ಡಿಸೋಜ, ಮೂಡ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್ ಹಾಗೂ ಮಂಡಲ ಕಾರ್ಯದರ್ಶಿ ಸುಮತಿ ಚಂದ್ರಶೇಖರ್ ಇದ್ದರು.

Leave a Reply

Your email address will not be published. Required fields are marked *