ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಎಎಸ್ ಅಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಗೆ 2016 ನೇ ಬ್ಯಾಚ್ ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣ ರಾವ್ ಅವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ.
ಕೆ. ಲಕ್ಷ್ಮಿಪ್ರಿಯಾ ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿ (ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಮತ್ತು ಸಮನ್ವಯ) ನೇಮಕ ಮಾಡಲಾಗಿದೆ. ಈ ಹುದ್ದೆಗೆ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಯೋಜನೆ ಮಾಡಲಾಗಿದೆ ಎಂದು ಸರಕಾರದ ಆದೇಶದಲ್ಲಿ ತಿಳಿಸಿದೆ.
ಪ್ರಸ್ತುತ ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಅಡಿಯಲ್ಲಿ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರಾಗಿದ್ದ ಪ್ರಕಾಶ್ ಜಿ. ಟಿ. ನಿಟ್ಟಾಲಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.



