
ಮಂಗಳೂರು: ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಸಮಗ್ರವಾಗಿ ನಡೆಸಬೇಕು. ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದವರ ಪಾತ್ರವನ್ನೂ ಪರಿಶೀಲಿಸಬೇಕು. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕು ಎಂದು ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಈ ಪ್ರಕರಣದಲ್ಲಿ ಈಗಾಗಲೇ ದಾಖಲಾಗಿರುವ ಎಫ್‌ಐಆರ್ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಬೇಕು. ಧರ್ಮಗುರುವಿನ ಕೃತ್ಯದ ಬಗ್ಗೆ ಪೂರ್ವ ಮಾಹಿತಿ ಇದ್ದರೂ ಕಾನೂನು ಕ್ರಮಕ್ಕೆ ವರದಿ ಮಾಡದೆ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿರುವ ಆರೋಪಗಳಿವೆ. ಇದರಲ್ಲಿ ಪೊಲೀಸ್ ಇಲಾಖೆ ಹಾಗೂ ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಪ್ರಭಾವಿ ವ್ಯಕ್ತಿಗಳ ಪಾತ್ರದ ಬಗ್ಗೆಯೂ ತನಿಖೆಯಾಗಬೇಕು. ಸಾಕ್ಷ್ಯಾಧಾರಗಳ ಆಧಾರದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಧರ್ಮಗುರುವಿನಿಂದ ಎಂಟು ಬಾಲಕರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಈ ಪೈಕಿ ಐವರು ಬಾಲಕರು ಬಿಷಪ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿತ್ತು. ಆದರೆ, ಮಾಹಿತಿ ತಿಳಿದಿದ್ದರೂ ಪೊಕ್ಸೊ ಕಾಯ್ದೆ-2012ರ ಸೆಕ್ಷನ್ 19 ಮತ್ತು 21ರ ಅಡಿಯಲ್ಲಿ ಪೊಲೀಸರಿಗೆ ಹಾಗೂ ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡದಿರುವುದು ಗಂಭೀರ ವಿಚಾರವಾಗಿದೆ. ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದವರನ್ನೂ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಪರಿಗಣಿಸಬೇಕು ಎಂದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯದ ಗಮನಕ್ಕೂ ಪೋಷಕರು ಪ್ರಕರಣವನ್ನು ತಂದಿದ್ದಾರೆ. ನಿರ್ದೇಶನಾಲಯವು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೂಚನೆ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು.
ಸಂಸ್ಥೆಯ ನಿರ್ದೇಶಕ ಪರಶುರಾಮ ಎಂ.ಎಲ್ ಅವರು ಮಾತನಾಡಿ, ಇದೇ ಧರ್ಮಗುರು ಹಲವು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಯುವಕನೊಬ್ಬ ಇ-ಮೇಲ್ ಮೂಲಕ ದೂರು ನೀಡಿದ್ದಾನೆ.25ಕ್ಕೂ ಹೆಚ್ಚು ವರ್ಷಗಳಲ್ಲಿ ಇನ್ನಷ್ಟು ಮಂದಿಗೆ ಲೈಂಗಿಕ ಕಿರುಕುಳ ನೀಡಿರುವ ಸಾಧ್ಯತೆಯಿದ್ದು, ಈ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
ಪ್ರಕರಣದ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು, ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಬಾಲ ನ್ಯಾಯ ಮಂಡಳಿ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆಸ್ಕರ್ ಲೂಯಿಸ್ ಇದ್ದರು.
ಇಲಾಖಾ ತನಿಖೆ ಭರವಸೆ: ಪರಶುರಾಮ
ಪ್ರಕರಣದ ತನಿಖೆಯಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯ ಮತ್ತು ವಿಳಂಬದ ಆರೋಪದ ಹಿನ್ನೆಲೆಯಲ್ಲಿ ಇಲಾಖಾ ತನಿಖೆ ನಡೆಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ನೀಡಿದ್ದಾರೆ. ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯ್ಕ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಅವರು ಭರವಸೆ ನೀಡಿದ್ದಾರೆ. ಇಲಾಖಾ ತನಿಖೆಯ ಮೂಲಕ ಸತ್ಯಾಸತ್ಯತೆ ಹೊರಬರಲಿದೆ ಎಂಬ ವಿಶ್ವಾಸವಿದೆ ಎಂದು ಪರಶುರಾಮ ತಿಳಿಸಿದರು.






