ಕಾರವಾರ: ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಡೆಸಲು ಉತ್ತರ ಕನ್ನಡ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ನವೆಂಬರ್ 15ರಂದು ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಗೆ ಒಟ್ಟು 1,970 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆಯ ಸಿದ್ಧತೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಲೋಕಸೇವಾ ಆಯೋಗದ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಜಾಮರ್ ಹಾಗೂ ವೆಬ್ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಸಂಭವಿಸದಂತೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರಿಗೆ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ ಎಂದರು.
ಪರೀಕ್ಷಾ ದಿನದಂದು ಅಭ್ಯರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗದಂತೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲು ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ. ಅಭ್ಯರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.
ಪ್ರತಿ ಪರೀಕ್ಷಾ ಕೊಠಡಿಗೆ ಇಬ್ಬರು ಸಂವೀಕ್ಷಕರನ್ನು ನೇಮಿಸಲಾಗಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನಿಯೋಜಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಬೇಕು ಎಂದು ಸೂಚಿಸಿದರು.
ಅಭ್ಯರ್ಥಿಗಳು ಹಾಗೂ ಪೋಷಕರು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇರಿಸಲಿದೆ ಎಂದು ಎಚ್ಚರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ಇನ್ಸ್ಪೆಕ್ಟರ್ ದರ್ಜೆಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳ ವಸ್ತ್ರಸಂಹಿತೆಯನ್ನು ಪರಿಶೀಲಿಸುವುದರ ಜತೆಗೆ, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ. ಕೇಂದ್ರಗಳ ಪ್ರವೇಶದ್ವಾರದಲ್ಲೇ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು ಎಂದರು.
ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಸಾಗಾಟದ ಸಂದರ್ಭದಲ್ಲಿ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಇದ್ದರು.





