ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ವಂಚನೆ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಒಂದು ಕೋಟಿ ರೂ.ವರೆಗಿನ ವಂಚನೆ ಪ್ರಕರಣಗಳನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು ತನಿಖೆ ನಡೆಸಬಹುದಾಗಿದ್ದು, ಅದಕ್ಕಿಂತ ಹೆಚ್ಚಿನ ಮೊತ್ತದ ಪ್ರಕರಣಗಳ ತನಿಖೆಯನ್ನು ಇನ್ಸ್‌ಪೆಕ್ಟರ್‌ಗಳು ಅಥವಾ ಅದಕ್ಕಿಂತ ಮೇಲ್ಮಟ್ಟದ ಅಧಿಕಾರಿಗಳು ಕೈಗೊಳ್ಳುವುದು ಕಡ್ಡಾಯವಾಗಿದೆ.
ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ. ಇದರ ಪ್ರಕಾರ, ಒಂದು ಕೋಟಿ ರೂ.ವರೆಗಿನ ವಂಚನೆ, ಹಣ ದುರ್ಬಳಕೆ ಹಾಗೂ ಇತರ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಟ್ಟದ ಅಧಿಕಾರಿಗಳು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಆದರೆ, ಒಂದು ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಆರ್ಥಿಕ ವಂಚನೆ ಮತ್ತು ಅಪರಾಧ ಪ್ರಕರಣಗಳ ತನಿಖೆಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ಅಥವಾ ಅದಕ್ಕಿಂತ ಹಿರಿಯ ಅಧಿಕಾರಿಗಳೇ ಕಡ್ಡಾಯವಾಗಿ ನಡೆಸಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಆರ್ಥಿಕ ಅಪರಾಧ ಹಾಗೂ ವಂಚನೆ ಪ್ರಕರಣಗಳ ತನಿಖೆಯ ಹೊಣೆಗಾರಿಕೆ ಹಂಚಿಕೆ ವಿಚಾರದಲ್ಲಿ ಪೊಲೀಸ್ ಇಲಾಖೆಯಲ್ಲಿ ಉಂಟಾಗುತ್ತಿದ್ದ ಗೊಂದಲ ನಿವಾರಿಸುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 30ರ ಅಡಿಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.
ರಾಜ್ಯದ ಎಲ್ಲ ಪೊಲೀಸ್ ಘಟಕಗಳ ಅಧಿಕಾರಿಗಳು ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಜಿಪಿ ನಿರ್ದೇಶನ ನೀಡಿದ್ದಾರೆ. ಇದರಿಂದ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯಲ್ಲಿ ಅಧಿಕಾರಿಗಳ ಹಂತ ಮತ್ತು ಹೊಣೆಗಾರಿಕೆ ಸ್ಪಷ್ಟವಾಗಲಿದೆ.





