ಕಾರವಾರ: ಶಾಲಾ ಮಕ್ಕಳು, ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳಿಗೆ ವಿತರಿಸುವ ಆಹಾರದಲ್ಲಿ ಗುಣಮಟ್ಟ ಮತ್ತು ಪೌಷ್ಟಿಕಾಂಶ ಕಡ್ಡಾಯವಾಗಿರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಆಹಾರದ ಗುಣಮಟ್ಟ ಪರಿಶೀಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ನ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಅವರು, ಆಹಾರ ತಯಾರಿಸುವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ನಿಗದಿತ ಪೌಷ್ಟಿಕಾಂಶಗಳನ್ನು ಒಳಗೊಂಡ ಆಹಾರ ವಿತರಣೆ ಖಚಿತಪಡಿಸಿಕೊಳ್ಳಬೇಕು. ಶಾಲೆಗಳ ಬಿಸಿಯೂಟ ಅಡುಗೆ ಕೊಠಡಿಗಳಲ್ಲಿ ದಾಸ್ತಾನು ಕೊಠಡಿ ಸೇರಿದಂತೆ ಅಗತ್ಯ ಸೌಲಭ್ಯ ಮತ್ತು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಆಹಾರ ತಯಾರಕರು ಹಾಗೂ ಸಹಾಯಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಬೇಕು. ವಿಳಂಬ ಮಾಡಬಾರದು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯ ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. 15ನೇ ಹಣಕಾಸು ಯೋಜನೆಯಡಿ ಮಂಜೂರಾಗಿರುವ ಎಂಟು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಶಿರಸಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಎಸ್ಆರ್ ನೆರವಿನಡಿ ಮಕ್ಕಳಿಗಾಗಿ ಆರಂಭಿಕ ಹಸ್ತಕ್ಷೇಪ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗೃಹಲಕ್ಷ್ಮಿ ಯೋಜನೆಯ ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಮೊತ್ತ ಪಾವತಿಗೆ ಬಿಲ್ ಸಿದ್ಧಪಡಿಸಲಾಗಿದೆ. ಎರಡು ವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಬೇಕು. ಶಾಲೆಗಳಿಗೆ ಗೈರುಹಾಜರಾಗುವ ಮಕ್ಕಳ ಪೋಷಕರ ಮನವೊಲಿಸಿ ಅವರನ್ನು ಮರಳಿ ಶಾಲೆಗೆ ಕರೆತರಬೇಕು. ಪಿಎಂ ಪೋಷಣ್ ಯೋಜನೆಯಡಿ ಶಾಲೆಗಳಲ್ಲಿ ಪೌಷ್ಟಿಕ ತೋಟ ನಿರ್ಮಿಸಬೇಕು. ಬಯೋಗ್ಯಾಸ್ ಘಟಕಗಳ ಅಳವಡಿಕೆಯ ಸಾಧ್ಯತೆಗಳನ್ನೂ ಪರಿಶೀಲಿಸಬೇಕು ಎಂದು ಸೂಚಿಸಿದರು.
ತೋಟಗಾರಿಕೆ ಇಲಾಖೆಯು ರೈತರಿಗೆ ವಿವಿಧ ಯೋಜನೆಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ರೈತರನ್ನು ಒಳಗೊಂಡ ವಾಟ್ಸಾಪ್ ಗುಂಪುಗಳನ್ನು ರಚಿಸಿ, ಯೋಜನೆಗಳ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕ್ರಿಯಾ ಯೋಜನೆಯಡಿ ಬಿಡುಗಡೆಯಾದ ಅನುದಾನ ಬಳಸಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಶಿರಸಿಯಲ್ಲಿ ಇತ್ತೀಚೆಗೆ ಬಾವಿಗಳಲ್ಲಿ ತೈಲ ಮಿಶ್ರಿತ ನೀರು ಪತ್ತೆಯಾಗಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕಾರಣ ಪತ್ತೆಹಚ್ಚಿ ಸಮಸ್ಯೆ ಪರಿಹರಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಉಪ ಕಾರ್ಯದರ್ಶಿಗಳಾದ ಅಲ್ಲಾಬಕಷ್, ಪ್ರಕಾಶ್ ಹಾಲಮ್ಮನವರ್, ಮುಖ್ಯ ಲೆಕ್ಕಾಧಿಕಾರಿ ಆನಂದ್ ಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.





