ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಮತ್ತು ಬಿಡಿ ಸಿಗರೇಟ್ ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಹಾಗೂ ಗೂಡಂಗಡಿಗಳ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ದಿಢೀರ್ ದಾಳಿ ನಡೆಸಿ, ಅಗತ್ಯವಿದ್ದಲ್ಲಿ ವ್ಯಾಪಾರ ಪರವಾನಗಿಯನ್ನೇ ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕಾಗಿ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದರೂ ಸಾರ್ವಜನಿಕ ಸ್ಥಳಗಳಲ್ಲಿ ಬಿಡಿ ಸಿಗರೇಟ್ ಮಾರಾಟ ಹಾಗೂ ಹೋಟೆಲ್, ಕೆಫೆಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ, ಪೊಲೀಸ್ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿ ನಡೆಸಬೇಕು. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆಯ ನಿಯಮ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹೊಸ ಅಂಗಡಿ ಮತ್ತು ಹೋಟೆಲ್ಗಳಿಗೆ ವ್ಯಾಪಾರ ಪರವಾನಗಿ ನೀಡುವಾಗ ಹಾಗೂ ನವೀಕರಿಸುವಾಗ ಬಿಡಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸುವ ಷರತ್ತನ್ನು ಕಡ್ಡಾಯವಾಗಿ ವಿಧಿಸಬೇಕು. ಈ ನಿಯಮ ಪಾಲಿಸದವರ ವಿರುದ್ಧ ಪರವಾನಗಿ ರದ್ದುಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಮಾತನಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತ ವಯಸ್ಕರಿಗೆ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಸಾಮಾಜಿಕ ಜಾಲತಾಣಗಳ ಪ್ರಭಾವ ಸೇರಿದಂತೆ ವಿವಿಧ ಕಾರಣಗಳಿಂದ ಹದಿಹರೆಯದವರು ಇಂತಹ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದರು.
ಶಾಲಾ-ಕಾಲೇಜುಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧದ ಕಾರ್ಯಾಚರಣೆಗೆ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ವಿರುದ್ಧ ಜಿಲ್ಲಾ ತಂಬಾಕು ನಿಯಂತ್ರಣ ಸಮಿತಿ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜತೆಗೆ, ಸಂಬಂಧಪಟ್ಟ ಅಂಗಡಿಗಳ ಪರವಾನಗಿ ರದ್ದುಗೊಳಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಶಿಫಾರಸು ಮಾಡಲಾಗಿದೆ ಎಂದರು.
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಮಾತನಾಡಿ, ಆಸ್ಪತ್ರೆ ಆವರಣದಲ್ಲಿ ಸಿಗರೇಟ್, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ತರುವುದು ಮತ್ತು ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಪಾಲನೆಗಾಗಿ ಪ್ರತಿದಿನ ತಪಾಸಣೆ ನಡೆಸಲಾಗುತ್ತಿದ್ದು, ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ತಂಬಾಕು ಮುಕ್ತ ಯುವ ಅಭಿಯಾನ 4.0ಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ 60 ದಿನಗಳ ಕಾಲ ಈ ಅಭಿಯಾನ ನಡೆಯಲಿದ್ದು, ಯುವಜನರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ.
ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


