ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲ ಹಂತದಲ್ಲಿ ವೈಫಲ್ಯ, ಬೆಲೆ ಏರಿಕೆ ವಿರುದ್ದ ಅಶೋಕ್ ವಾಗ್ದಾಳಿ

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ರಾಜಕೀಯ ರಾಜ್ಯ ಶಿರಸಿ

Spread the love

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ವಿವಾದಾತ್ಮಕ ನಿರ್ಧಾರಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದೆ. ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯುವ ಯಾವುದೇ ಪ್ರಯತ್ನವನ್ನು ಬಿಜೆಪಿ ಸಹಿಸುವುದಿಲ್ಲ. ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪವಾದರೆ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಪ್ರಸ್ತಾಪವೇ ಅಪ್ರಸ್ತುತ. ಸರ್ಕಾರ ಮತ್ತೆ ಇದೇ ವಿಚಾರದಲ್ಲಿ ಮುಂದುವರಿದರೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಲಿದೆ. ಇಂತಹ ವಿಷಯಗಳಿಗೆ ಆದ್ಯತೆ ನೀಡುವ ಬದಲು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಭರವಸೆಗಳ ಮೂಲಕ ಜನರನ್ನು ಮರಳು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ. ಒಂದು ಕಡೆ ಉಚಿತ ಯೋಜನೆಗಳನ್ನು ಘೋಷಿಸಿ, ಮತ್ತೊಂದೆಡೆ ಹಾಲು, ವಿದ್ಯುತ್, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವ ಸರ್ಕಾರದ ನಿಜವಾದ ಮುಖವಾಡ ಕಳಚಿದೆ ಎಂದು ಟೀಕಿಸಿದರು.

ಅಲ್ಪಸಂಖ್ಯಾತ ಸಮುದಾಯದ 5,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಗಾಗಿ ತಲಾ 50 ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡುವ ಪ್ರಸ್ತಾವನೆ ಸಚಿವ ಸಂಪುಟದ ಮುಂದಿರುವುದು ಮತಬ್ಯಾಂಕ್ ರಾಜಕಾರಣದ ಭಾಗವಾಗಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಅಧಿವೇಶನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದರು.

ರಾಜ್ಯದಲ್ಲಿ ಬಾಬರ್ ಆಡಳಿತ ನಡೆಯುತ್ತಿರುವಂತೆ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಒಂದು ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ವಿಶೇಷ ಸೌಲಭ್ಯ ಕಲ್ಪಿಸಿದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಗತಿಯೇನು? ಒಕ್ಕಲಿಗ, ಲಿಂಗಾಯತ, ಬಂಟ, ಬಿಲ್ಲವ ಸೇರಿದಂತೆ ಇತರ ಸಮುದಾಯಗಳ ವಿದ್ಯಾರ್ಥಿಗಳೂ ಮಕ್ಕಳಲ್ಲವೇ? ಒಂದೇ ಸಮುದಾಯಕ್ಕೆ ವಿಶೇಷ ಸೌಲಭ್ಯ ನೀಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಉರ್ದು ಶಾಲೆಗಳ ಅಭಿವೃದ್ಧಿಗೆ 100 ಕೋಟಿ ರೂ., ಇಮಾಮ್‌ಗಳಿಗೆ 6 ಸಾವಿರ ರೂ. ಗೌರವಧನ ಹಾಗೂ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 30 ಲಕ್ಷ ರೂ.ವರೆಗೆ ನೆರವು ನೀಡುವ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಆದರೆ ಎಲ್ಲ ಸಮುದಾಯಗಳ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಮಳೆ ಬಂದರೆ ಶಾಲಾ ಕಟ್ಟಡಗಳು ಸೋರುತ್ತಿದ್ದು, ಅವುಗಳ ಅಭಿವೃದ್ಧಿಗೆ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಡಾ. ಮಂಜುಳಾ ರಾವ್, ವಿಕಾಸ್ ಪುತ್ತೂರು, ಡಾ. ಲಕ್ಷ್ಮೀ ಅಶ್ವಿನ್‌ಗೌಡ, ಭಾರತೀಶ್, ಮುನಿಸ್ವಾಮಿ, ನಂದನ್ ಮಲ್ಯ, ಮನೋಹರ ಶೆಟ್ಟಿ, ವಸಂತ ಪೂಜಾರಿ ಹಾಗೂ ಜೀವನ್ ತೊಕ್ಕೊಟ್ಟು ಇದ್ದರು.

ರಾಜ್ಯದಾದ್ಯಂತ ಬಿಜೆಪಿ ಅಭಿಯಾನ

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಚುನಾವಣಾ ಭರವಸೆಗಳಿಗೂ ವಾಸ್ತವಕ್ಕೂ ಇರುವ ಅಂತರವನ್ನು ಜನರ ಮುಂದಿಡಲು ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ. ಮಂಗಳೂರು ವಿಭಾಗದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಸರ್ಕಾರ ಚುನಾವಣೆಗೆ ಮುನ್ನ ನೀಡಿದ ಭರವಸೆಗಳೇನು, ಅಧಿಕಾರಕ್ಕೆ ಬಂದ ಬಳಿಕ ಮಾಡಿದ್ದೇನು ಎಂಬುದನ್ನು ಜನರಿಗೆ ತಿಳಿಸುವ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರ್. ಅಶೋಕ್ ತಿಳಿಸಿದರು.

Leave a Reply

Your email address will not be published. Required fields are marked *