ಕಾನೂನು ಸುವ್ಯವಸ್ಥೆ, ಅಪರಾಧ ತಡೆಗೆ ವಿಶೇಷ ಗಮನ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ: ನೂತನ ಐಜಿಪಿ ಶಶಿಕುಮಾರ್

ಶಿರಸಿ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ರಾಜ್ಯ

Spread the love

ಮಂಗಳೂರು: ಪಶ್ಚಿಮ ವಲಯದ ನಾಲ್ಕು ಜಿಲ್ಲೆಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರು ತಿಳಿಸಿದ್ದಾರೆ.

ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಂತಿಯುತ ವಾತಾವರಣ ನಿರ್ಮಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಈ ಸಂಬಂಧ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದರು.

2012-13 ರಲ್ಲಿ ಚಿಕ್ಕಮಗಳೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ 2021 ರಿಂದ 2023 ರವರೆಗೆ ಎರಡೂವರೆ ವರ್ಷ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದೇನೆ. ಈ ಹಿಂದಿನ ಅನುಭವ ಈಗಿನ ಜವಾಬ್ದಾರಿ ನಿರ್ವಹಣೆಗೆ ಸಹಕಾರಿ ಆಗಲಿದೆ. ವಲಯದ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಅಲ್ಲಿನ ಕಾನೂನು ಸುವ್ಯವಸ್ಥೆ, ಅಪರಾಧ ಪ್ರಕರಣಗಳು ಮತ್ತು ಸೂಕ್ಷ್ಮ ವಿಚಾರಗಳ ಕುರಿತು ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರತಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಂಡು ಮುಂದಿನ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಗಳ ಪೊಲೀಸ್ ಘಟಕಗಳು ಜಿಲ್ಲಾಡಳಿತದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಹಲವು ಘಟಕಗಳ ಅಧಿಕಾರಿಗಳು ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸ್ಥಳೀಯ ಪರಿಸ್ಥಿತಿಗಳ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಅನುಭವ ಹೊಂದಿರುವ ಅಧಿಕಾರಿಗಳ ತಂಡದೊಂದಿಗೆ ಸಮನ್ವಯದ ಕೆಲಸ ಮಾಡುವ ವಿಶ್ವಾಸವಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವುದು, ಪ್ರಕರಣಗಳನ್ನು ಪತ್ತೆಹಚ್ಚುವುದು ಹಾಗೂ ಸಂಚಾರ ಸಮಸ್ಯೆಗಳನ್ನು ನಿಯಂತ್ರಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿಗಳಾಗಿವೆ. ಇದರ ಜತೆಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರೇರೇಪಿಸುವ ಕೆಲಸವೂ ನಡೆಯಬೇಕು. ಪೊಲೀಸ್ ಇಲಾಖೆಯಲ್ಲಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಅತ್ಯಗತ್ಯ. ಯಾವುದೇ ಘಟನೆ ಸಂಭವಿಸಿದಾಗ ತಕ್ಷಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಸಂಭವನೀಯ ಸಮಸ್ಯೆಗಳ ಕುರಿತು ಮುಂಚಿತವಾಗಿ ಚರ್ಚಿಸಿ ಸಿದ್ಧತೆ ಮಾಡಿಕೊಳ್ಳುವುದು ಅಗತ್ಯ. ಮಂಗಳೂರಿನಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಹಾಗೂ ಮಾಧ್ಯಮಗಳಿಂದ ಉತ್ತಮ ಸಹಕಾರ ದೊರೆತಿತ್ತು. ಮುಂದೆಯೂ ಇದೇ ರೀತಿಯ ಸಹಕಾರ ನಿರೀಕ್ಷಿಸುತ್ತೇನೆ ಎಂದರು.

ಪಶ್ಚಿಮ ವಲಯದ ವ್ಯಾಪ್ತಿಯಲ್ಲಿ ಅಂತರ್‌ರಾಜ್ಯ ಗಡಿಗಳು, ಬಯಲುಸೀಮೆ, ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಿವೆ. ಕರಾವಳಿ ಪ್ರವಾಸೋದ್ಯಮ ಕ್ಷೇತ್ರವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ವಿಮಾನ, ರೈಲು ಮತ್ತು ಜಲಮಾರ್ಗಗಳ ಮೂಲಕ ಜನರ ಸಂಚಾರವೂ ಹೆಚ್ಚಾಗಿದೆ. ಹತ್ತು ವರ್ಷಗಳ ಹಿಂದಿನ ಕರಾವಳಿ ಪ್ರದೇಶಕ್ಕೂ ಈಗಿನ ಪರಿಸ್ಥಿತಿಗೂ ಸಾಕಷ್ಟು ವ್ಯತ್ಯಾಸವಿದೆ. ಈ ಬದಲಾವಣೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.

ಕಲಬುರಗಿ, ಹುಬ್ಬಳ್ಳಿ-ಧಾರವಾಡ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ ಅನುಭವವಿದೆ. ಪ್ರತಿ ಪ್ರದೇಶಕ್ಕೂ ತನ್ನದೇ ಆದ ಸ್ಥಳೀಯ ಸಮಸ್ಯೆಗಳಿರುತ್ತವೆ. ಅವುಗಳನ್ನು ಸಮಗ್ರವಾಗಿ ಅರ್ಥಮಾಡಿಕೊಂಡು ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಚಿಕ್ಕಮಗಳೂರಿನಲ್ಲಿ ಹಿಂದೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನಕ್ಸಲ್ ಸಮಸ್ಯೆ ಪ್ರಮುಖ ಸವಾಲಾಗಿತ್ತು. ಇದೀಗ ಆ ಸಮಸ್ಯೆ ಬಗೆಹರಿದಿರುವ ಹಿನ್ನೆಲೆಯಲ್ಲಿ ಎಎನ್‌ಎಫ್ ಶಿಬಿರದ ಸ್ವರೂಪವೂ ಬದಲಾಗಿದೆ. ಯಾವುದೇ ಹೊಸ ಸಮಸ್ಯೆಗಳು ಎದುರಾದರೂ ಸಾರ್ವಜನಿಕರ ಹಿತದೃಷ್ಟಿಯಿಂದ ಶಾಂತಿಯುತ ವಾತಾವರಣ ಕಾಪಾಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕಾಡಾನೆ ಸಮಸ್ಯೆ– ಮುನ್ನೆಚ್ಚರಿಕೆಗೆ ಒತ್ತು

ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಾವು ಅಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕಾಡಾನೆಗಳ ಸಮಸ್ಯೆ ಇದ್ದರೂ ಪ್ರಾಣಹಾನಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರಲಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರಾಣಹಾನಿ ಹಾಗೂ ರೈತರ ಬೆಳೆಗಳಿಗೆ ಹಾನಿಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಘಟನೆಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ ಎಂದರು.

ಕಾನೂನು ಬಾಹಿರ ಚಟುವಟಿಕೆಗೆ ಕಡಿವಾಣ: ಶಶಿಕುಮಾರ್

ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯನ್ನು ಹೊರತುಪಡಿಸಿ, ಪಶ್ಚಿಮ ವಲಯದ ನಾಲ್ಕು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿ ಐಜಿಪಿ ಕಚೇರಿಯ ಅಧೀನದಲ್ಲಿರುತ್ತದೆ. ಈ ಜಿಲ್ಲೆಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಹಾಗೂ ಸಾರ್ವಜನಿಕರ ನೆಮ್ಮದಿ, ಶಾಂತಿಗೆ ಭಂಗ ಉಂಟುಮಾಡುವ ವ್ಯಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದು ನೂತನ ಐಜಿಪಿ ಎನ್. ಶಶಿಕುಮಾರ್ ತಿಳಿಸಿದರು.

Leave a Reply

Your email address will not be published. Required fields are marked *