ಮಂಗಳೂರು: ಅಂಗವಿಕಲ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಗುರುತಿಸಿ, ಅವರಿಗೆ ಹೆಚ್ಚಿನ ಅವಕಾಶ ಹಾಗೂ ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯ ಎಂದು ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಮೈ ಭಾರತ್ ದಕ್ಷಿಣ ಕನ್ನಡ ಹಾಗೂ ವಿವಿಧ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕರಾವಳಿ ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ವಿಶೇಷಚೇತನರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷಚೇತನ ಮಕ್ಕಳಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಇಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳು ಪ್ಯಾರಾ ಒಲಿಂಪಿಕ್ಸ್‌ನಲ್ಲಿಯೂ ಭಾಗವಹಿಸುವಂತಾಗಲು ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಮಾತನಾಡಿ, ವಿಶೇಷಚೇತನರ ಬಗ್ಗೆ ಸಮಾಜದಲ್ಲಿ ಕಾಳಜಿ ತೋರಿಸುವುದರ ಜತೆಗೆ ಅವರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು. ಕ್ರೀಡಾಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವರಿಗೆ ಅವಕಾಶ ದೊರೆಯುತ್ತದೆ ಎಂದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ 20ಕ್ಕೂ ಅಧಿಕ ವಿಶೇಷಚೇತನ ಶಾಲೆಗಳ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ವೇಣೂರು ವಿಶೇಷ ಶಾಲೆಯ ಪ್ರಾಂಶುಪಾಲೆ ಭಗಿನಿ ಶಾಲೆಟ್ ಪಿಂಟೋ, ಕ್ರೀಡಾ ಇಲಾಖೆಯ ಅಧಿಕಾರಿ ರಜನಿ, ಬಿ.ಎಂ. ತುಂಬೆ ಹಾಗೂ ನೋಡಲ್ ಅಧಿಕಾರಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೇರಿಗಾರ್ ಇದ್ದರು.


