ಮಂಗಳೂರು: ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಬೆಂಬಲ ನೀಡಲಿದ್ದು, ನ್ಯಾಯ ಸಿಗುವವರೆಗೆ ಅವರ ಪರವಾಗಿ ಹೋರಾಟ ನಡೆಸುವುದಾಗಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.
12 ದಿನಗಳಿಂದ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಬಾರದು. ಅವರ ಬೇಡಿಕೆಗಳಿಗೆ ನ್ಯಾಯ ದೊರೆಯುವವರೆಗೆ ಕನ್ನಡಪರ ಸಂಘಟನೆಗಳು ಬೆಂಬಲವಾಗಿ ನಿಲ್ಲಲಿವೆ. ಅಗತ್ಯ ಬಿದ್ದರೆ ಈ ಹೋರಾಟದಲ್ಲಿ ಜೈಲಿಗೆ ಹೋಗಲೂ ಸಿದ್ಧ ಎಂದು ತಿಳಿಸಿದರು.
ಮಹಿಳೆಯರ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಶಾ ಕಾರ್ಯಕರ್ತೆಯರ ಕುರಿತು ನಿರ್ಲಕ್ಷ್ಯದ ಧೋರಣೆ ತೋರಿದ್ದಾರೆ. ಆರೋಗ್ಯ ಸಚಿವ ಯು.ಟಿ. ಖಾದರ್ ಕೂಡ ತಮ್ಮ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ನಡೆಯುತ್ತದೆ ಎಂಬ ಸಚಿವರ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ. ಈ ರಾಜ್ಯಕ್ಕೆ ಖಾದರ್ ಇಲ್ಲದಿದ್ದರೂ ನಡೆಯುತ್ತದೆ. ಮೊದಲು ಅವರು ತಮ್ಮ ಜವಾಬ್ದಾರಿ ಅರಿತು ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.
ಆಶಾ ಕಾರ್ಯಕರ್ತೆಯರ ಹೋರಾಟ 2028ರ ಚುನಾವಣೆಗೆ ದಿಕ್ಸೂಚಿಯಾಗಬೇಕು. ರಾಜ್ಯದ ಮಹಿಳೆಯರೆಲ್ಲರೂ ಸಂಘಟಿತರಾಗಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು. ಮಹಿಳೆಯರನ್ನು ನಿರ್ಲಕ್ಷಿಸುವ ಧೋರಣೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಜಮೀನು ಹಂಚಿಕೆ ಕುರಿತು ಶ್ವೇತಪತ್ರ ಹೊರಡಿಸಲಿ
ರಾಜ್ಯದಲ್ಲಿ ರೈತರಿಂದ ಕಡಿಮೆ ಬೆಲೆಗೆ ಜಮೀನು ಪಡೆದು ಉದ್ಯಮಿಗಳಿಗೆ ದುಬಾರಿ ಮೌಲ್ಯದಲ್ಲಿ ನೀಡಲಾಗುತ್ತಿದೆ. ಕಳೆದ 25 ವರ್ಷಗಳಲ್ಲಿ ಕೈಗಾರಿಕೆಗಳು, ಖಾಸಗಿ ಸಂಸ್ಥೆಗಳು ಹಾಗೂ ವಿವಿಧ ಯೋಜನೆಗಳಿಗೆ ಸರ್ಕಾರ ಹಂಚಿಕೆ ಮಾಡಿರುವ ಜಮೀನಿನ ಸಂಪೂರ್ಣ ವಿವರಗಳನ್ನು ಒಳಗೊಂಡ ಶ್ವೇತಪತ್ರವನ್ನು ತಕ್ಷಣ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಕೈಗಾರಿಕೆಗಳಿಗೆ ಜಮೀನು ನೀಡುವ ಸಂದರ್ಭದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಭರವಸೆ ನೀಡಲಾಗುತ್ತದೆ. ಆದರೆ, ಆ ಭರವಸೆಗಳು ಈಡೇರುತ್ತಿಲ್ಲ. ವಿದೇಶಗಳಿಗೆ ತೆರಳುವ ರಾಜ್ಯ ಸರ್ಕಾರದ ನಿಯೋಗಗಳು ಉದ್ಯಮಿಗಳಿಗೆ ಜಮೀನು, ನೀರು, ವಿದ್ಯುತ್ ಹಾಗೂ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುವ ಭರವಸೆ ನೀಡುತ್ತವೆ. ಆದರೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಸರ್ಕಾರ ಮೌನ ವಹಿಸುತ್ತಿದೆ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ರಚನೆಯಾದ ಸರೋಜಿನಿ ಮಹಿಷಿ ಸಮಿತಿಯ ವರದಿಯನ್ನು ಇಂದಿಗೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ರಾಜ್ಯದ ಕೈಗಾರಿಕೆಗಳು ಹಾಗೂ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಶೇ.80ರಿಂದ ಶೇ.100ರಷ್ಟು ಉದ್ಯೋಗ ಮೀಸಲಾತಿ ನೀಡಬೇಕೆಂಬ ವರದಿಯ ಆಶಯವನ್ನು ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ಟೀಕಿಸಿದರು.
ಜಿಂದಾಲ್ ಸೇರಿದಂತೆ ಹಲವು ಬೃಹತ್ ಕಂಪನಿಗಳಿಗೆ ಸಾವಿರಾರು ಎಕರೆ ಜಮೀನನ್ನು ಕಡಿಮೆ ದರದಲ್ಲಿ ನೀಡಲಾಗಿದೆ. ಯಾವ ಕಂಪನಿಗೆ ಎಷ್ಟು ಜಮೀನು, ಯಾವ ದರದಲ್ಲಿ ಮತ್ತು ಯಾವ ಷರತ್ತುಗಳಡಿ ನೀಡಲಾಗಿದೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು. ಉದ್ಯೋಗ ನೀಡುವ ಕುರಿತು ಕಂಪನಿಗಳು ನೀಡಿದ್ದ ಭರವಸೆಗಳಲ್ಲಿ ಎಷ್ಟು ಈಡೇರಿವೆ ಎಂಬುದನ್ನೂ ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಈ ಕುರಿತು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕು. ಜಮೀನು ಪಡೆದು ಉದ್ಯೋಗದ ಭರವಸೆ ಈಡೇರಿಸದ ಕಂಪನಿಗಳಿಂದ ಜಮೀನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ರತ್ನಾಕರ ಸುವರ್ಣ, ಪ್ರಮುಖರಾದ ಎಸ್.ಎಲ್. ಭಾರದ್ವಾಜ್, ಶಿವರಾಮ ಕಾಸರಗೋಡು, ವಿನೋದ್ ಕುಮಾರ್ ಹಾಗೂ ಜಿತೇಂದ್ರ ಇದ್ದರು.
ಕಾಸರಗೋಡಿನಲ್ಲಿ ಕನ್ನಡದ ಉಳಿವಿಗೆ ಹೋರಾಟದ ಎಚ್ಚರಿಕೆ
ಕಾಸರಗೋಡು ಭಾಗದಲ್ಲಿ ಕನ್ನಡ ಭಾಷೆ, ಕನ್ನಡ ಶಾಲೆಗಳು ಹಾಗೂ ಕನ್ನಡಿಗರ ಹಕ್ಕುಗಳು ದಿನದಿಂದ ದಿನಕ್ಕೆ ದುರ್ಬಲವಾಗುತ್ತಿವೆ. ಕಾಸರಗೋಡಿನಲ್ಲಿ ಕನ್ನಡ ಶಾಲೆಗಳ ಸಂಖ್ಯೆ ಗಣನೀಯವಾಗಿ ಕುಸಿದಿದ್ದು, ಹಲವು ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇದೆ. ಕನ್ನಡ ಉಪನ್ಯಾಸಕರು, ಪಠ್ಯಪುಸ್ತಕಗಳು ಹಾಗೂ ಮೂಲಸೌಕರ್ಯಗಳ ಅಭಾವದಿಂದ ಗಡಿಭಾಗದ ಕನ್ನಡಿಗ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಕನ್ನಡಿಗರಿಗೆ ಸೂಕ್ತ ಸ್ಥಾನಮಾನ, ಗೌರವ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಅವಕಾಶ ಕಲ್ಪಿಸಬೇಕು. ಕನಿಷ್ಠ 300 ಕನ್ನಡ ಶಾಲೆಗಳಿಗೆ ಅಗತ್ಯ ಶಿಕ್ಷಕರು, ಕೊಠಡಿಗಳು ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.
ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ 30 ದಿನಗಳೊಳಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಎದುರು ತೀವ್ರ ಸ್ವರೂಪದ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಸಿದರು. ಕಾಸರಗೋಡಿನಲ್ಲಿ ಕನ್ನಡದ ಅಸ್ಮಿತೆ ಉಳಿಸಲು ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳನ್ನು ಒಗ್ಗೂಡಿಸಿ ಹೋರಾಟ ನಡೆಸಲಾಗುವುದು. ಹೊರನಾಡ ಕನ್ನಡಿಗರ ಹಾಗೂ ಅಲ್ಲಿನ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ಹರಿಸಬೇಕು. ಇದಕ್ಕಾಗಿ ಮುಂಬರುವ ಬಜೆಟ್ನಲ್ಲಿ 500 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.


