ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಸೂಚನೆ

ಆರೋಗ್ಯ ಕಾರವಾರ ಜಿಲ್ಲಾ ಸುದ್ದಿ ಶಿರಸಿ

Spread the love

ಕಾರವಾರ: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಕಾಯಿಲೆ ಕಾಣಿಸಿಕೊಳ್ಳುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸುವ ಮೂಲಕ ರೋಗ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮಂಗನ ಕಾಯಿಲೆ ನಿಯಂತ್ರಣ ಕುರಿತ ಅಂತರ ಇಲಾಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಸಿದ್ದಾಪುರ, ಶಿರಸಿ, ಹೊನ್ನಾವರ, ಅಂಕೋಲಾ ಮತ್ತು ಜೋಯಿಡಾ ತಾಲೂಕುಗಳಲ್ಲಿ ಪ್ರತಿವರ್ಷ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಈ ಭಾಗದ ಜನರಿಗೆ ಕಾಯಿಲೆಯ ಲಕ್ಷಣಗಳು, ಹರಡುವ ವಿಧಾನ ಹಾಗೂ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಬೇಕು. ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಮಂಗಗಳು ಮೃತಪಟ್ಟಿರುವುದು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕಾಡು ಹಾಗೂ ತೋಟಗಳಿಗೆ ತೆರಳುವ ಸಂದರ್ಭದಲ್ಲಿ ದೇಹಕ್ಕೆ ಡೇಪಾ ಎಣ್ಣೆಯನ್ನು ಹಚ್ಚಿಕೊಳ್ಳಬೇಕು. ಜಾನುವಾರುಗಳ ಮೈಮೇಲಿರುವ ಉಣ್ಣೆಗಳನ್ನು ತೆಗೆದುಹಾಕಿ, ಅವುಗಳಿಗೆ ಉಣ್ಣೆ ನಿವಾರಕ ತೈಲವನ್ನು ಲೇಪಿಸಬೇಕು. ಜ್ವರ ಕಾಣಿಸಿಕೊಂಡಲ್ಲಿ ನಿರ್ಲಕ್ಷ್ಯ ಮಾಡದೆ ಕೂಡಲೇ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈಯಕ್ತಿಕ ರಕ್ಷಣಾ ಕ್ರಮಗಳನ್ನು ಅನುಸರಿಸುವ ಮೂಲಕ ಮಂಗನ ಕಾಯಿಲೆಯಿಂದ ದೂರವಿರಲು ಸಾಧ್ಯವಿದ್ದು, ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಔಷಧಗಳು ಮತ್ತು ಡೇಪಾ ತೈಲವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಳ್ಳಬೇಕು. ಆರೋಗ್ಯ, ಅರಣ್ಯ ಹಾಗೂ ಪಶುಪಾಲನಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾಯಿಲೆ ನಿಯಂತ್ರಣದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರದೆ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ 12 ಮಂದಿಗೆ ಮಂಗನ ಕಾಯಿಲೆ ದೃಢ

ಸಭೆಯಲ್ಲಿ ಜಿಲ್ಲೆಯ ಮಂಗನ ಕಾಯಿಲೆ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಈ ವರ್ಷ ಇದುವರೆಗೆ ಮಂಗನ ಕಾಯಿಲೆ ಪರೀಕ್ಷೆಗಾಗಿ ಒಟ್ಟು 3,317 ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ಈ ಪೈಕಿ 12 ಮಂದಿಗೆ ಕಾಯಿಲೆ ದೃಢಪಟ್ಟಿದೆ. ದುರದೃಷ್ಟವಶಾತ್ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ 53 ಮಂಗಗಳು ಮೃತಪಟ್ಟಿರುವುದು ವರದಿಯಾಗಿದೆ. ಈ ಪೈಕಿ 10 ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ಮಾದರಿಯಲ್ಲಿ ಕಾಯಿಲೆಯ ಸೋಂಕು ದೃಢಪಟ್ಟಿಲ್ಲ. ಅಲ್ಲದೆ, 716 ಉಣ್ಣೆಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ಅವುಗಳಲ್ಲಿಯೂ ಸೋಂಕು ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕ್ಯಾ. ರಮೇಶ್ ರಾವ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *