ಮಂಗಳೂರು: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ಕಾಮಗಾರಿಗಳನ್ನು ಹೊರತುಪಡಿಸಿ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈಗಾಗಲೇ ವಿವಿಧ ಯೋಜನೆಗಳಿಗಾಗಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾಸ್ಥಿತಿಗೆ ತಂದು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಮಳೆ ನೀರಿನ ಸರಾಗ ಹರಿವಿಗೆ ಅಡ್ಡಿಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು. ಖಾಸಗಿ ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಗೂ ಅವಶೇಷಗಳನ್ನು ರಸ್ತೆ ಮತ್ತು ಫುಟ್ಪಾತ್ಗಳಲ್ಲಿ ಹಾಕಿರುವುದನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.
ತೀವ್ರ ಮಳೆಯಿಂದ ಹಾನಿಗೊಳಗಾಗುವ ಮನೆಗಳ ಸಮೀಕ್ಷೆಯನ್ನು 48 ಗಂಟೆಯೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಅಪಾಯಕಾರಿ ಮರಗಳನ್ನು ಗುರುತಿಸಿ ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲದ ಸಿದ್ಧತೆಗಾಗಿ ನೇಮಕವಾಗಿರುವ ವಾರ್ಡ್ವಾರು ಇನ್ಸಿಡೆಂಟ್ ಕಮಾಂಡರ್ಗಳು ಸಾರ್ವಜನಿಕರ ಸೇವೆಗೆ ಸದಾ ಲಭ್ಯವಿರಬೇಕು. ತಮ್ಮ ವ್ಯಾಪ್ತಿಯ ಪ್ರತಿಯೊಂದು ಪ್ರದೇಶಕ್ಕೂ ಭೇಟಿ ನೀಡಿ ಮಳೆ ಹಾನಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಅರಣ್ಯ, ಅಗ್ನಿಶಾಮಕ, ನಿಯಂತ್ರಣ ಕೊಠಡಿ ಸೇರಿದಂತೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಯುಜಿಡಿ ಬ್ಲಾಕ್ ಆಗಿ ನೀರು ನಿಲ್ಲುವ ಪರಿಸ್ಥಿತಿ ಉಂಟಾಗದಂತೆ ನೋಡಿಕೊಳ್ಳಬೇಕು. ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಅರ್ಧ ಗಂಟೆಯೊಳಗೆ ತೆರವುಗೊಳಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ., ಮಳೆಗಾಲ ಹಾಗೂ ವಿಪತ್ತು ನಿರ್ವಹಣೆಗೆ ನಿಯೋಜಿತ ಸರ್ಕಾರಿ ನೌಕರರು ಕರ್ತವ್ಯ ನಿರ್ಲಕ್ಷ್ಯ ತೋರಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್., ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಾಂಶಗಳು
► ಹೊಸ ಕಾಮಗಾರಿಗಳಿಗೆ ತಾತ್ಕಾಲಿಕ ನಿರ್ಬಂಧ
► ಅಗೆದ ರಸ್ತೆಗಳನ್ನು ತಕ್ಷಣ ಯಥಾಸ್ಥಿತಿಗೆ ತರಲು ಸೂಚನೆ
► ಮಳೆ ಹಾನಿ ಸಮೀಕ್ಷೆ 48 ಗಂಟೆಯೊಳಗೆ ಪೂರ್ಣಗೊಳಿಸಲು ಆದೇಶ
► ಕರ್ತವ್ಯ ಲೋಪಕ್ಕೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ
What do you feel about this post?
Like
Love
Happy
Haha
Sad
