ಮಂಗಳೂರು: ಜೂನ್ 21ರಂದು ನಡೆವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಆಯೋಜಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ. ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗವು ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡುವ ಅತ್ಯುತ್ತಮ ಸಾಧನವಾಗಿದೆ. ಈ ಹಿನ್ನೆಲೆಯಲ್ಲಿ ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕಿದೆ ಎಂದರು.
ಜಿಲ್ಲಾಡಳಿತ, ಆಯುಷ್ ಇಲಾಖೆ, ಆಯುಷ್ ಮಹಾವಿದ್ಯಾಲಯಗಳು, ವಿವಿಧ ಯೋಗ ಸಂಘಟನೆಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಮಂಗಳೂರಿನ ಪುರಭವನದ ಮಿನಿ ಸಭಾಂಗಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸುವಂತೆ ಅವರು ಸೂಚಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಕುಡಿಯುವ ನೀರು, ಸ್ವಚ್ಛತೆ, ತುರ್ತು ವೈದ್ಯಕೀಯ ನೆರವು ಹಾಗೂ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನ ಸಂಘಟನೆಗಳು ಮತ್ತು ಸಾರ್ವಜನಿಕರ ಭಾಗವಹಿಸುವಿಕೆ ಹೆಚ್ಚಿಸಲು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
What do you feel about this post?
Like
Love
Happy
Haha
Sad
