ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಯಶಸ್ವಿ ಆಡಳಿತದ 12 ವರ್ಷಗಳ ಪೂರೈಕೆ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಮೈಲಿಗಲ್ಲು ಸ್ಥಾಪಿಸಿದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 12 ವರ್ಷಗಳಿಂದ ನಿರಂತರವಾಗಿ ಜನಪರ ಆಡಳಿತ ನೀಡುತ್ತಿದ್ದು, ‘ವಿಕಸಿತ ಭಾರತ’ದ ಸಂಕಲ್ಪದೊಂದಿಗೆ ದೇಶ ಮುನ್ನಡೆಯುತ್ತಿದೆ ಎಂದು ಹೇಳಿದರು. ದೇಶದ ಜನರ ಆಶೀರ್ವಾದ ಅವರಿಗೆ ಸದಾ ದೊರೆಯಲಿದೆ ಎಂದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪ್ರಧಾನಿ ಮೋದಿ ಅವರ ಆಡಳಿತದ 12ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಶನಿವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ಅಗರ್ವಾಲ್ ಜಿಲ್ಲೆಗೆ ಭೇಟಿ ನೀಡಲಿದ್ದು, ಮಂಗಳೂರಿನ ಮಾರ್ಗನ್ಗೇಟ್ನ ಪಾಲೆಮಾರ್ ಗಾರ್ಡನ್ನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತು ಯತೀಶ್ ಆರ್ವರ್, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ, ಸುಧೀರ್ ಶೆಟ್ಟಿ ಕಣ್ಣೂರು, ಮೋನಪ್ಪ ಭಂಡಾರಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರಾಜ್ಗೋಪಾಲ್ ರೈ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.
What do you feel about this post?
Like
Love
Happy
Haha
Sad
