ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆಯ ಭಾಗವಾಗಿ ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅಭಿನಂದನ್ ಗೌಡ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಿರುವ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧವೇ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ಜಿಲ್ಲೆಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಮುಂದುವರೆಸಿದ್ದಾರೆ.
What do you feel about this post?
Like
Love
Happy
Haha
Sad



