ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯ ಜೊತೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶದ ನಾಗರಿಕರು ಅಕ್ರಮವಾಗಿ ದೇಶ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಹಾಗೂ ಕೋಡಿಕಲ್ ಪ್ರದೇಶಗಳಲ್ಲಿ ಈಗಾಗಲೇ 16 ಮಂದಿ ಅಕ್ರಮ ವಲಸಿಗರನ್ನು ಪೊಲೀಸರು ಪತ್ತೆಹಚ್ಚಿದ್ದು, ಪೊಲೀಸ್ ಇಲಾಖೆಯ ಕ್ರಮ ಶ್ಲಾಘನೀಯವಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಅಕ್ರಮ ವಲಸಿಗರು ಪತ್ತೆಯಾಗುವ ಸಾಧ್ಯತೆ ಇರುವುದರಿಂದ ಅವರನ್ನು ಗುರುತಿಸಲು ಜಿಲ್ಲಾಮಟ್ಟದಲ್ಲಿ ವಿಶೇಷ ಕಾರ್ಯಪಡೆ ರಚಿಸಿ ಸಮಗ್ರ ಕಾರ್ಯಾಚರಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಕ್ರಮ ವಲಸಿಗರಿಗೆ ನಕಲಿ ದಾಖಲೆಗಳನ್ನು ಒದಗಿಸುವುದು, ಬಾಡಿಗೆ ಮನೆಗಳನ್ನು ವ್ಯವಸ್ಥೆ ಮಾಡಿಕೊಡುವುದು ಸೇರಿದಂತೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಇದಕ್ಕೆ ನೆರವಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಬಾಡಿಗೆ ಮನೆಗಳ ಮಾಹಿತಿಯನ್ನು ಸಂಗ್ರಹಿಸಿ, ಅಲ್ಲಿ ವಾಸಿಸುವವರು ಭಾರತೀಯ ನಾಗರಿಕರೇ ಅಥವಾ ಅಕ್ರಮವಾಗಿ ದೇಶ ಪ್ರವೇಶಿಸಿದವರೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಹಿಂದೆ ನಡೆದ ಚುನಾವಣೆಗಳಲ್ಲಿ ಅಕ್ರಮ ವಲಸಿಗರು ನಕಲಿ ದಾಖಲೆಗಳ ಮೂಲಕ ಮತದಾನ ಮಾಡಿರುವ ಸಾಧ್ಯತೆ ಕುರಿತು ಕೂಡ ಸಮಗ್ರ ತನಿಖೆ ನಡೆಸಬೇಕು. ದೇಶದ ಭದ್ರತೆಯ ದೃಷ್ಟಿಯಿಂದ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ರಾಜ್ಯ ಸರ್ಕಾರ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.
What do you feel about this post?
Like
Love
Happy
Haha
Sad



