100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿ, ನಿಗದಿತ ಅವದಿಯೊಳಗೆ ಮುಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವನೀಯ ಭೂಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ₹100 ಕೋಟಿ ವೆಚ್ಚದ ಭೂಕುಸಿತ ತಡೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

<

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ತಡೆಗಾಗಿ ₹100 ಕೋಟಿ ವೆಚ್ಚದಲ್ಲಿ ಒಟ್ಟು 99 ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಎಲ್ಲಾ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, 80 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಕಾರ್ಯಾದೇಶ ಪಡೆದಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಇನ್ನೂ 19 ಕಾಮಗಾರಿಗಳು ಆರಂಭವಾಗದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಾಮಗಾರಿಗಳು ಆರಂಭವಾಗದಿರುವುದಕ್ಕೆ ಸೂಕ್ತ ಕಾರಣ ಹಾಗೂ ಸಮರ್ಪಕ ವಿವರಣೆ ನೀಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಕಾರ್ಯಾದೇಶ ನೀಡಿರುವ ಕಾಮಗಾರಿಗಳ ಪ್ರಸ್ತುತ ಪ್ರಗತಿ ಕುರಿತು ವಿವರವಾದ ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದರು.

ಕಾರ್ಯಾದೇಶ ನೀಡಿದ ಬಳಿಕ ಯಾವುದೇ ಕಾರಣಕ್ಕೂ ಕಾಮಗಾರಿಗಳಲ್ಲಿ ವಿಳಂಬವಾಗದಂತೆ ಅನುಷ್ಠಾನ ಇಲಾಖೆಗಳು ಎಚ್ಚರಿಕೆ ವಹಿಸಬೇಕು. ಮಳೆಗಾಲದಲ್ಲಿ ಭೂಕುಸಿತ ಸೇರಿದಂತೆ ಸಂಭವನೀಯ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳ ನಿರ್ವಹಣೆ ಕುರಿತಂತೆ ರಾಜ್ಯದಿಂದ ಗುತ್ತಿಗೆ ಪಡೆದಿರುವ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯ ಎಲ್ಲ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಮಳೆ ಪ್ರಮಾಣದ ನಿಖರ ಮಾಹಿತಿಯು ವಿಪತ್ತು ನಿರ್ವಹಣೆಯಲ್ಲಿ ಪ್ರಮುಖವಾಗಿರುವುದರಿಂದ ಯಂತ್ರಗಳ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರವಾಗಿರುವ ಮಣ್ಣನ್ನು ತೆರವುಗೊಳಿಸುವ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ನದಿಯಲ್ಲಿ ಮಣ್ಣು ಶೇಖರಣೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಹಿನ್ನೆಲೆಯಲ್ಲಿ ತೆರವು ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಅವರು ಸೂಚಿಸಿದರು.

ಈ ಕುರಿತು ಬಂದರು ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ಗಂಗಾವಳಿ ನದಿಯಲ್ಲಿನ ಮಣ್ಣು ತೆರವು ಕಾರ್ಯವನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ವರ್ಚುವಲ್ ಮೂಲಕ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *