ಕಾರವಾರ: ತಾಲೂಕಿನ ರಾಜ್ಯ ಹೆದ್ದಾರಿ 6ರ ಕಾರವಾರ–ದೇವಳಮಕ್ಕಿ–ಕೆರವಾಡಿ–ಬೋಳ್ವೆ–ಇರಪಾಗೆ–ಮಲ್ಲಾಪುರ ರಸ್ತೆಯಲ್ಲಿ 30 ಟನ್ಗಿಂತ ಹೆಚ್ಚಿನ ಭಾರವುಳ್ಳ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ಬೃಹತ್ ಹಾಗೂ ಅಧಿಕ ಭಾರದ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ಉಂಟಾಗಿ ರಸ್ತೆ ಹಾಳಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳ ಸುರಕ್ಷತೆಗೆ ಅಪಾಯ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹಾಳಾಗಿರುವ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರ ಲಘು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯು ವಾಹನ ಸಂಚಾರ ನಿಷೇಧದ ಕುರಿತು ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆ ದುರಸ್ತಿ ಪೂರ್ಣಗೊಂಡ ಬಳಿಕ ಬೃಹತ್ ವಾಹನಗಳ ಸಂಚಾರಕ್ಕೆ ರಸ್ತೆ ಯೋಗ್ಯವಾಗಿದೆ ಎಂಬುದನ್ನು ದೃಢಪಡಿಸುವ ರಸ್ತೆ ಸುರಕ್ಷತಾ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಅಲ್ಲದೆ, ಪೊಲೀಸ್ ಇಲಾಖೆಯು ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ, ಸಂಚಾರ ದಟ್ಟಣೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಯಾವುದೇ ಅಪಘಾತ ಸಂಭವಿಸದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದ್ದಾರೆ.
What do you feel about this post?
Like
Love
Happy
Haha
Sad





