ಮಂಗಳೂರು: ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಫುಟ್ಪಾತ್ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿದರು.
ಹಂಪನಕಟ್ಟೆ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಫುಟ್ಪಾತ್ಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ವ್ಯಾಪಾರ ವ್ಯವಸ್ಥೆ ಹಾಗೂ ವಿವಿಧ ವಸ್ತುಗಳನ್ನು ತೆರವುಗೊಳಿಸಲಾಯಿತು. ಬಳಿಕ ಸಾರ್ವಜನಿಕರು ಹಾಗೂ ಪಾದಚಾರಿಗಳು ಫುಟ್ಪಾತ್ಗಳನ್ನು ಸುಗಮವಾಗಿ ಬಳಸಲು ಅನುವು ಮಾಡಿಕೊಡಲಾಯಿತು.

ಫುಟ್ಪಾತ್ಗಳು ಸಾರ್ವಜನಿಕರ, ಅದರಲ್ಲೂ ಪಾದಚಾರಿಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ಮೀಸಲಾಗಿವೆ. ಹೀಗಾಗಿ ಯಾವುದೇ ರೀತಿಯ ಅಕ್ರಮ ಒತ್ತುವರಿಯನ್ನು ಸಹಿಸಲಾಗುವುದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದರು.
ಕಾರ್ಯಾಚರಣೆ ವೇಳೆ ಬೀದಿ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಅಧಿಕಾರಿಗಳು, ಮುಂದಿನ ದಿನಗಳಲ್ಲಿಯೂ ಫುಟ್ಪಾತ್ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಾದಚಾರಿಗಳ ಸಂಚಾರಕ್ಕೆ ತೊಂದರೆ ಆಗದಂತೆ ವ್ಯಾಪಾರ ನಡೆಸಬೇಕು. ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.



