ಬೆಂಗಳೂರು: ಅಬಕಾರಿ ಇಲಾಖೆಗೆ ಸಂಬಂಧಿಸಿದ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಆಪ್ತರು ಹಾಗೂ ಬೆಂಬಲಿಗರಿಗೆ ಸೇರಿದ ಮನೆಗಳು ಮತ್ತು ಕಚೇರಿಗಳನ್ನೂ ಗುರಿಯಾಗಿಸಿಕೊಂಡು ಏಕಕಾಲದಲ್ಲಿ ಸುಮಾರು 14 ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳ ತಂಡಗಳು ಶೋಧ ನಡೆಸುತ್ತಿವೆ ಎಂದು ತಿಳಿದು ಬಂದಿದೆ.
ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ಗಳ ಅಕ್ರಮ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಈ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಜೂನ್ನಲ್ಲಿ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ಅವರ ನಿವಾಸದ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ಅದರ ಮುಂದುವರೆದ ಭಾಗವಾಗಿ ಸತೀಶ್ ಜಾರಕಿಹೊಳಿ ಅವರ ಆಪ್ತರು ಮತ್ತು ಬೆಂಬಲಿಗರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.



