ಕೈಗಾರಿಕಾ ಪ್ರದೇಶಗಳಿಗೆ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ರಾಜ್ಯ ಶಿರಸಿ

Spread the love

ಕಾರವಾರ: ಜಿಲ್ಲೆಯ ಎಲ್ಲ ಕೈಗಾರಿಕಾ ಪ್ರದೇಶಗಳಿಗೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

<

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಹಾಗೂ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯ** ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಟ್ಕಳ, ದಾಂಡೇಲಿ, ಹಳಿಯಾಳ, ಕುಮಟಾ, ಯಲ್ಲಾಪುರ, ಶಿರಸಿ, ಶಿರವಾಡ ಹಾಗೂ ರಾಮನಗರದಲ್ಲಿರುವ ಕೈಗಾರಿಕಾ ವಸಾಹತು ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಉದ್ದಿಮೆದಾರರಿಂದ ಬೇಡಿಕೆಗಳನ್ನು ಪಡೆದು ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಬೇಡಿಕೆಗಳನ್ನು ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಲ್ಲಿ ಸೇರಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಬಾಕಿ ಪ್ರಕರಣ ಶೀಘ್ರ ವಿಲೇವಾರಿ

ಕೈಗಾರಿಕಾ ವಸಾಹತುಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ನಕ್ಷೆಗಳನ್ನು ಸರಿಪಡಿಸಿ ಇ–ಸ್ವತ್ತು ನೀಡುವ ಕಾರ್ಯಕ್ಕೆ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರಸ್ತುತ ಇ–ಸ್ವತ್ತು ವಿತರಣೆ ಕಾರ್ಯ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಕೈಗಾರಿಕಾ ವಸಾಹತುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸ್ಥಗಿತಗೊಂಡಿರುವ ಘಟಕಗಳ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಬೇಕು. ಅಧಿಕಾರಿಗಳು ಪ್ರತಿಯೊಂದು ಕೈಗಾರಿಕಾ ವಸಾಹತಿಗೂ ಖುದ್ದು ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯುತ್ ಸೌಲಭ್ಯಕ್ಕೆ ಕ್ರಮ

ರಾಮನಗರ ಹಾಗೂ ಕುಮಟಾ ಕೈಗಾರಿಕಾ ವಸಾಹತುಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲು 33/1 ಕೆ.ವಿ. ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕುರಿತು ಹಾಗೂ ಅಂಬೇವಾಡಿ ಆಟೊನಗರ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಕೆಐಎಡಿಬಿ ನಿರ್ದೇಶನದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕುಮಟಾ ತಾಲ್ಲೂಕಿನ ಮಿರ್ಜಾನ್‌ನಲ್ಲಿರುವ ವಿಶ್ವ ಮಳಿಗೆ ನೋಂದಣಿ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕುಮಟಾ ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ವಿದ್ಯುತ್ ಪೂರೈಕೆ ಮಾರ್ಗ ಅಳವಡಿಸಲು ಅಂದಾಜುಪಟ್ಟಿ ಮಂಜೂರಾಗಿದ್ದು, ರೈಲು ಹಳಿಯ ಕೆಳಗೆ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಬಾಕಿ ಇದೆ. ಈ ಕಾಮಗಾರಿ ಸೇರಿದಂತೆ ಸಂಪೂರ್ಣ ಕೆಲಸವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೆಸ್ಕಾಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕೈಗಾರಿಕೆ ಬೇಡಿಕೆಗೆ ತಕ್ಕ ಕೌಶಲ್ಯ ತರಬೇತಿ

ಜಿಲ್ಲೆಯ ಕೈಗಾರಿಕಾ ಘಟಕಗಳಿಗೆ ಅಗತ್ಯವಿರುವ ತಾಂತ್ರಿಕ ಕೌಶಲ್ಯದ ಸಿಬ್ಬಂದಿ ಕುರಿತು ಕೈಗಾರಿಕೋದ್ಯಮಿಗಳಿಂದ ಮಾಹಿತಿ ಹಾಗೂ ಬೇಡಿಕೆ ಪಡೆದುಕೊಳ್ಳಬೇಕು. ಬಳಿಕ ಜಿಲ್ಲೆಯ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಕೈಗಾರಿಕೆಗಳ ಬೇಡಿಕೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ಆಯೋಜಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯ್ಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh