ಕಾರವಾರ: ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್ವರೆಗಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮತ್ತೆ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ಮಳೆಗಾಲದಲ್ಲಿ ಗುಡ್ಡದ ಮೇಲಿನಿಂದ ನೀರು ರಭಸವಾಗಿ ಹರಿದು, ಕಲ್ಲು ಮತ್ತು ಮಣ್ಣು ರಸ್ತೆಗೆ ಬೀಳುವ ಅಪಾಯವಿದ್ದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜುಲೈ 4ರಿಂದ ಈ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಕಾರವಾರದಿಂದ ಅಂಕೋಲಾ ಕಡೆಗೆ ತೆರಳುವ ರಸ್ತೆಯಲ್ಲಿ ವಾಹನ ಹಾಗೂ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಿ, ಅಂಕೋಲಾದಿಂದ ಕಾರವಾರದ ಕಡೆಗೆ ಬರುವ ರಸ್ತೆಯಲ್ಲಿ ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
ಇದೀಗ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಗಣಿಸಿ, ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


