ಎಸ್ಸಿ,ಎಸ್ಟಿ ಯೋಜನೆಗಳ ಅನುದಾನ ಬಳಕೆಯಲ್ಲಿ ವಿಳಂಬ ಬೇಡ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ ಬಿಡುಗಡೆಯಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ಸಕಾಲದಲ್ಲಿ ತಲುಪಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸೌಲಭ್ಯ ಒದಗಿಸಲು ಬಿಡುಗಡೆಯಾಗುವ ಅನುದಾನವನ್ನು ವಿಳಂಬವಿಲ್ಲದೆ, ನಿಗದಿತ ಗುರಿಗಳಿಗೆ ಅನುಗುಣವಾಗಿ ಸಮರ್ಪಕವಾಗಿ ವೆಚ್ಚ ಮಾಡಬೇಕು. ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ ವಹಿಸದೆ, ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಎಲ್ಲಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಸ್ಪಂದನೆಗೆ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ನಡೆದ ಪ್ರಕರಣಗಳು ವರದಿಯಾದ ತಕ್ಷಣ ಅಧಿಕಾರಿಗಳು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯುವ ಪರಿಹಾರ ಹಾಗೂ ಇತರ ಸೌಲಭ್ಯಗಳ ಕುರಿತು ಅಗತ್ಯ ಮಾಹಿತಿ ಒದಗಿಸಿ, ಅವು ಸಕಾಲದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಇದೇ ವೇಳೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಉದ್ದೇಶಕ್ಕಾಗಿ ಮೀಸಲಿಟ್ಟಿರುವ ಜಾಗ ಒತ್ತುವರಿಯಾಗಿರುವುದು ಕಂಡುಬಂದಲ್ಲಿ ತಕ್ಷಣ ಪರಿಶೀಲನೆ ನಡೆಸಿ, ಒತ್ತುವರಿ ತೆರವು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕಷ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ್ ವೈ.ಕೆ. ಸತೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *