ಋತುಬಂಧ ಸಮಸ್ಯೆಗಳಿಗೆ ಋತುತಾರೆ ಯೋಜನೆ, ಡಿಸೆಂಬರ್ 2ನೇ ವಾರದಿಂದ ದ.ಕ. ಜಿಲ್ಲೆಯಲ್ಲಿ ಪ್ರಾಯೋಗಿಕ ಜಾರಿ: ಡಿಎಚ್ ಒ ಡಾ. ತಿಮ್ಮಯ್ಯ

ಆರೋಗ್ಯ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಶಿಕ್ಷಣ

Spread the love

ಮಂಗಳೂರು: ಮಹಿಳೆಯರ ಆರೋಗ್ಯದ ಕಡೆಗೆ ವಿಶೇಷ ಗಮನ ಹರಿಸುವ ಉದ್ದೇಶದಿಂದ ರಾಜ್ಯ ಸರಕಾರ ರೂಪಿಸಿರುವ ‘ಋತುತಾರೆ’ ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. 35 ವರ್ಷ ಮೇಲ್ಪಟ್ಟ ಮಹಿಳೆಯರಲ್ಲಿ ಋತುಬಂಧದ ಪೂರ್ವ ಮತ್ತು ನಂತರದ ಹಂತಗಳಲ್ಲಿ ಕಾಣಿಸಿಕೊಳ್ಳುವ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಉಚಿತ ಸಮಾಲೋಚನೆ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಋತುಬಂಧದ ಸಂದರ್ಭದಲ್ಲಿ ಮಹಿಳೆಯರು ಸಿಡುಕುತನ, ದೇಹದಲ್ಲಿ ಅತಿಯಾದ ಬಿಸಿಯ ಅನುಭವ, ಮೈಕೈ ನೋವು, ನಿದ್ರಾಹೀನತೆ, ಕೆಲಸದಲ್ಲಿ ಆಸಕ್ತಿ ಕಡಿಮೆಯಾಗುವುದು ಹಾಗೂ ಭಾವನಾತ್ಮಕ ತೊಳಲಾಟ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಇಂತಹ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಚಿಕಿತ್ಸೆ ದೊರೆಯಬೇಕು ಎಂಬ ಉದ್ದೇಶದಿಂದ ಕರ್ನಾಟಕ ಆರೋಗ್ಯ ಇಲಾಖೆ ದೇಶದಲ್ಲೇ ಮೊದಲ ಬಾರಿಗೆ ಈ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ ಎರಡನೇ ವಾರದಲ್ಲಿ ಯೋಜನೆ ಆರಂಭಿಸುವ ಸಾಧ್ಯತೆ ಇದೆ. ಇದಕ್ಕಾಗಿ ಆಶಾ ಕಾರ್ಯಕರ್ತೆಯರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಬಳಿಕ ಅವರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ, ಸಮಸ್ಯೆ ಎದುರಿಸುತ್ತಿರುವ ಮಹಿಳೆಯರನ್ನು ಗುರುತಿಸಲಿದ್ದಾರೆ. ಅಗತ್ಯವಿರುವವರಿಗೆ ಸಂಜೀವಿನಿ ದೂರವಾಣಿ ಸಮಾಲೋಚನೆ ವ್ಯವಸ್ಥೆಯ ಮೂಲಕ ವೈದ್ಯಕೀಯ ಸಲಹೆ ಮತ್ತು ಮಾರ್ಗದರ್ಶನ ಒದಗಿಸಲಾಗುತ್ತದೆ ಎಂದರು.

100 ದಿನಗಳ ಅಭಿಯಾನದ ರೂಪದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದ್ದು, ಅದರ ಫಲಿತಾಂಶ ಮತ್ತು ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿ, ಕ್ರಿಯಾ ಯೋಜನೆ ರೂಪಿಸಿದ ಬಳಿಕ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರವನ್ನೂ ಪಡೆಯಲಾಗುವುದು ಎಂದು ತಿಳಿಸಿದರು.

ಸ್ತನ, ಗರ್ಭಕಂಠದ ಕ್ಯಾನ್ಸರ್ ತಪಾಸಣೆಗೆ ಒತ್ತು

ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಲಭ್ಯವಿರುವ ತಂತ್ರಜ್ಞಾನವನ್ನು ಬಳಸಿಕೊಂಡು ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆಹಚ್ಚುವ ತಪಾಸಣೆಗೆ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂದು ಡಾ. ತಿಮ್ಮಯ್ಯ ತಿಳಿಸಿದರು.

ಮಹಿಳೆಯರು ಸ್ವಯಂ ಸ್ತನ ತಪಾಸಣೆ ಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸ್ತನದಲ್ಲಿ ಗಡ್ಡೆ ಕಾಣಿಸಿಕೊಳ್ಳುವುದು, ಮೊಲೆತೊಟ್ಟಿನಿಂದ ನೀರು ಅಥವಾ ರಕ್ತ ಸ್ರವಿಸುವುದು, ಸ್ತನದ ಆಕಾರದಲ್ಲಿ ಬದಲಾವಣೆ ಕಂಡುಬರುವುದು ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಆರಂಭದಲ್ಲೇ ಪತ್ತೆಹಚ್ಚಿದರೆ ಸೂಕ್ತ ಚಿಕಿತ್ಸೆ ಮೂಲಕ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೇಳಿದರು.

ಗರ್ಭಕಂಠದ ಕ್ಯಾನ್ಸರ್ ಎಚ್‌ಪಿವಿ ವೈರಸ್ ಸೋಂಕಿನಿಂದ ಉಂಟಾಗುತ್ತದೆ. ಸೋಂಕು ತಗುಲಿದ 10ರಿಂದ 15 ವರ್ಷಗಳ ಬಳಿಕವೂ ಕ್ಯಾನ್ಸರ್ ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ನಿಯಮಿತ ತಪಾಸಣೆ ಮತ್ತು ಆರಂಭಿಕ ಪತ್ತೆ ಬಹಳ ಮುಖ್ಯ. ಬಿಳಿಸ್ರಾವ, ಅಸಹಜ ರಕ್ತಸ್ರಾವ, ಮುಟ್ಟಿನ ನಡುವಿನ ರಕ್ತಸ್ರಾವ, ಸಂಭೋಗದ ಬಳಿಕ ರಕ್ತಸ್ರಾವ ಹಾಗೂ ದುರ್ವಾಸನೆಯ ಸ್ರಾವ ಕಂಡುಬಂದರೆ ನಿರ್ಲಕ್ಷಿಸದೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಆರ್ ಸಿಎಚ್ ಡಾ. ರಾಜೇಶ್ ಇದ್ದರು.

Leave a Reply

Your email address will not be published. Required fields are marked *