ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿರುವ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೃತ ಫಲಾನುಭವಿಗಳ ಮಾಹಿತಿ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಲಭ್ಯವಿದೆ. ಸಂಬಂಧಪಟ್ಟ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಪರಿಶೀಲನೆ ನಡೆಸಿ ತಾಲೂಕು ಮಟ್ಟದ ಸಭೆಗೆ ಸಲ್ಲಿಸಬೇಕು. ಗೃಹಲಕ್ಷ್ಮಿ ಯೋಜನೆಯಡಿ ದುರುಪಯೋಗವಾಗಿರುವ ಹಣವನ್ನು ಮರುಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಮಾಹಿತಿ ಸಂಗ್ರಹಣೆ ಮತ್ತು ಮುಂದಿನ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಇ-ಕೆವೈಸಿ ಪ್ರಕ್ರಿಯೆ ಶೇ 89ರಷ್ಟು ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವಿಶೇಷಚೇತನರಿಗೆ ಬಸ್‌ಗಳಲ್ಲಿ ಮೀಸಲಿಟ್ಟ ಆಸನಗಳನ್ನು ಬಿಟ್ಟುಕೊಡುತ್ತಿಲ್ಲ ಎಂಬ ದೂರುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಬಸ್‌ಗಳಲ್ಲಿ ವಿಶೇಷಚೇತನರಿಗೆ ಮೀಸಲಾದ ಆಸನಗಳ ಸ್ಥಳದಲ್ಲಿ ಗುರುತಿನ ಚೀಟಿ ಅಂಟಿಸಲಾಗಿದ್ದು, ಆ ಆಸನಗಳನ್ನು ಅವರಿಗೆ ಬಿಟ್ಟುಕೊಡುವಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಿನ್ನಿಗೋಳಿಯಲ್ಲಿ ಲೈನ್‌ಮ್ಯಾನ್‌ಗಳ ಕೊರತೆ
ಕಿನ್ನಿಗೋಳಿ ವಿದ್ಯುತ್ ಶಾಖೆಯಲ್ಲಿ ಲೈನ್‌ಮ್ಯಾನ್‌ಗಳ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು. ಪ್ರಸ್ತುತ ಇಬ್ಬರು ಲೈನ್‌ಮ್ಯಾನ್‌ಗಳಿದ್ದರೂ ಅವರು ಬೇರೆ ಕಡೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಿನ್ನಿಗೋಳಿ ಶಾಖೆಗೆ ಮೊದಲ ಆದ್ಯತೆ ನೀಡುವಂತೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪವರ್‌ಮ್ಯಾನ್‌ಗಳ ಕೊರತೆಯಿಂದ ಉಂಟಾಗಿರುವ ಕೆಲಸದ ಒತ್ತಡ ಕಡಿಮೆ ಮಾಡಲು ಹೆಚ್ಚುವರಿಯಾಗಿ ನಾಲ್ವರು ಗ್ಯಾಂಗ್‌ಮ್ಯಾನ್‌ಗಳನ್ನು ಕಿನ್ನಿಗೋಳಿ ಶಾಖೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಯುವನಿಧಿ ಯೋಜನೆಯ ಪ್ರಯೋಜನ ಅರ್ಹ ಯುವಜನರಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲೆಯ ಕಾಲೇಜುಗಳ ಸೂಚನಾ ಫಲಕಗಳಲ್ಲಿ ಯೋಜನೆಯ ವಿವರಗಳನ್ನು ಪ್ರಕಟಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಭರತ್ ಮುಂಡೋಡಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಸಮಿತಿ ಉಪಾಧ್ಯಕ್ಷರಾದ ಸುರೇಖಾ ಚಂದ್ರಹಾಸ್, ಶೇಖರ್ ಕುಕ್ಕೆಡಿ, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೈಮೆಂಟ್ ಕುಟಿನ್ಹ, ಜಯಂತಿ ಬಿ.ಎ., ಪಿ.ಎಸ್. ಗಂಗಾಧರ್, ಉಮಾನಾಥ್ ಶೆಟ್ಟಿ, ಆಲಿಸ್ಟನ್ ಕ್ಲೈವ್ ಡಿ ಕುನ್ಹ, ಎಸ್. ರಫೀಕ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.


