ಸುರತ್ಕಲ್ (ಮುಕ್ಕ): ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಮತ್ತು ಕೌಶಲ್ಯಗಳಿಗೆ ಸೂಕ್ತ ವೇದಿಕೆ ದೊರೆತಾಗ ಅವರ ವ್ಯಕ್ತಿತ್ವ ವಿಕಸನದ ಜತೆಗೆ ಭವಿಷ್ಯದ ಸಾಧನೆಗೂ ದಾರಿಯಾಗುತ್ತದೆ. ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಉಪನಿರ್ದೇಶಕ ಪ್ರೊ. ಸತೀಶ್ ಬಿ. ನಾಯ್ಕ್ ಹೇಳಿದರು.
ಮುಕ್ಕದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪದವಿಪೂರ್ವ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕಾಗಿ ಆಯೋಜಿಸಿದ್ದ ರಾಜ್ಯಮಟ್ಟದ ‘ಇನ್ಸ್ಪೈರ್ 2026’ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಜನ್ಮತಃ ವಿಶಿಷ್ಟ ಪ್ರತಿಭೆ ಮತ್ತು ಸಾಮರ್ಥ್ಯಗಳಿರುತ್ತವೆ. ಅವುಗಳನ್ನು ಗುರುತಿಸಿ ಪ್ರದರ್ಶಿಸಲು ಸೂಕ್ತ ಅವಕಾಶಗಳು ಅಗತ್ಯ. ಈ ನಿಟ್ಟಿನಲ್ಲಿ ಇನ್ಸ್ಪೈರ್ ಉತ್ಸವ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ಕಲ್ಪಿಸಿದೆ. ಇಂತಹ ಕಾರ್ಯಕ್ರಮಗಳು ಆತ್ಮವಿಶ್ವಾಸ ಹೆಚ್ಚಿಸುವುದರ ಜತೆಗೆ ಸುಪ್ತ ಪ್ರತಿಭೆಗಳನ್ನು ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ಜೀವನದಲ್ಲಿ ಎದುರಾಗುವ ಸೋಲು ಮತ್ತು ಸವಾಲುಗಳಿಂದ ನಿರಾಶರಾಗದೆ ಆಶಾವಾದಿ ಮನೋಭಾವದಿಂದ ಮುನ್ನಡೆಯಬೇಕು. ನಿರಂತರ ಪ್ರಯತ್ನ, ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಯಶಸ್ಸು ಸಾಧಿಸಲು ಸಾಧ್ಯ. ದೊರೆಯುವ ಪ್ರತಿಯೊಂದು ಅವಕಾಶವನ್ನೂ ಸದುಪಯೋಗಪಡಿಸಿಕೊಂಡು ಸೃಜನಶೀಲತೆ ಬೆಳೆಸಿಕೊಳ್ಳಬೇಕು. ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸಂವಹನ ಕೌಶಲ, ನಾಯಕತ್ವ ಗುಣ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಗೌರವ ಅತಿಥಿಯಾಗಿದ್ದ ಉಡುಪಿ ಜಿಲ್ಲೆಯ ಅನುದಾನಿತ ಮತ್ತು ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಹಾಗೂ ಕಟಪಾಡಿ ಎಸ್ವಿಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಪೈ ಮಾತನಾಡಿ, ಶಿಕ್ಷಣವೆಂದರೆ ಕೇವಲ ಪದವಿ ಪಡೆಯುವುದಲ್ಲ. ಅದು ಜ್ಞಾನ ಸಂಪಾದನೆಯ ನಿರಂತರ ಪ್ರಕ್ರಿಯೆ. ಶಿಕ್ಷಣದ ಪ್ರತಿಯೊಂದು ಹಂತವೂ ತನ್ನದೇ ಆದ ಕಲಿಕಾ ವಿಧಾನ ಮತ್ತು ಮಹತ್ವ ಹೊಂದಿದೆ ಎಂದರು.

ಸ್ವಾಮಿ ವಿವೇಕಾನಂದರ ಮಾತುಗಳನ್ನು ಉಲ್ಲೇಖಿಸಿದ ಅವರು, ಜ್ಞಾನವೇ ಶಿಕ್ಷಣದ ನಿಜವಾದ ಸಾರವಾಗಿದ್ದು, ಜ್ಞಾನಾರ್ಜನೆ ಜೀವನದುದ್ದಕ್ಕೂ ಮುಂದುವರಿಯಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ, ಸಮರ್ಪಣೆ ಮತ್ತು ಬದ್ಧತೆಯನ್ನು ಬೆಳೆಸಿಕೊಂಡು ಗುರಿ ಸಾಧನೆಗೆ ನಿರಂತರ ಶ್ರಮಿಸಬೇಕು. ಇನ್ಸ್ಪೈರ್ ಉತ್ಸವ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ಅವಕಾಶ ಒದಗಿಸಿದೆ ಎಂದು ಶ್ಲಾಘಿಸಿದರು.
ತಮ್ಮ ಪುತ್ರಿ ಡಾ. ಅನನ್ಯಾ ಅವರು ಶ್ರೀನಿವಾಸ ದಂತವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಂತವೈದ್ಯಕೀಯ ಪದವಿ ಪೂರ್ಣಗೊಳಿಸಿರುವುದನ್ನು ಪ್ರಸ್ತಾಪಿಸಿದ ಅವರು, ಶ್ರೀನಿವಾಸ ವಿಶ್ವವಿದ್ಯಾಲಯವು ಉನ್ನತ ಶಿಕ್ಷಣಕ್ಕೆ ಪೂರಕವಾದ ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿದೆ. ಶೈಕ್ಷಣಿಕ ಮತ್ತು ವೃತ್ತಿಪರ ಜೀವನದಲ್ಲಿ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಸಂಸ್ಥೆ ಉತ್ತಮ ಆಯ್ಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿ ಸದಸ್ಯೆ ಪ್ರೊ. ಎ. ಮಿತ್ರ ಎಸ್. ರಾವ್ ಮಾತನಾಡಿ, ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳ ಮುಗ್ಧತೆ ಮತ್ತು ಸೃಜನಶೀಲತೆಯನ್ನು ಉಳಿಸಿಕೊಳ್ಳುವ ಮಹತ್ವವನ್ನು ವಿವರಿಸಿದರು.
ಪರೀಕ್ಷೆಗಳನ್ನು ಭಯ ಮತ್ತು ಒತ್ತಡದ ಮೂಲವೆಂದು ಪರಿಗಣಿಸದೆ, ಜ್ಞಾನ ಹಾಗೂ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳುವ ಅವಕಾಶವಾಗಿ ಸ್ವೀಕರಿಸಬೇಕು. ಕೆಲವೇ ಗಂಟೆಗಳ ಪರೀಕ್ಷೆಯಿಂದ ವಿದ್ಯಾರ್ಥಿಯ ಸಂಪೂರ್ಣ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅಳೆಯಲು ಸಾಧ್ಯವಿಲ್ಲ. ಜೀವನದಲ್ಲಿ ಗೆಲುವು ಮತ್ತು ಸೋಲು ಸಹಜ. ಸೋಲಿನಿಂದ ಪಾಠ ಕಲಿತು ಸವಾಲುಗಳನ್ನು ಎದುರಿಸುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದರು. ಮುಂಬರುವ ಪದವಿಪೂರ್ವ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಮನೋಭಾವದಿಂದ ಎದುರಿಸುವಂತೆ ಸಲಹೆ ನೀಡಿದರು.
ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿ ಸದಸ್ಯೆ ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಎನ್. ಹೆಗಡೆ ಸ್ವಾಗತಿಸಿ, ಶ್ರೀನಿವಾಸ ವಿಶ್ವವಿದ್ಯಾಲಯದ 38 ವರ್ಷಗಳ ಸಾಧನೆ ಮತ್ತು ಬೆಳವಣಿಗೆಯ ಕುರಿತು ಮಾಹಿತಿ ನೀಡಿದರು.
ಉತ್ಸವದ ಸಂಚಾಲಕ ಪ್ರೊ. ವಿಶ್ವಾಸ್ ಸಿ. ಶೆಟ್ಟಿ ಅವರು ವಿವಿಧ ಸ್ಪರ್ಧೆಗಳ ವಿವರ ನೀಡಿದರು. ಪ್ರೊ. ಕೆ. ಶ್ರೀನಾಥ್ ರಾವ್ ಅತಿಥಿಗಳನ್ನು ಪರಿಚಯಿಸಿದರು. ಮಂಜುಶ್ರೀ ಮತ್ತು ಶ್ರೇಯಾ ಪ್ರಾರ್ಥಿಸಿದರು. ಡಾ. ಪ್ರವೀಣ್ ಬ್ಲೆಸ್ಸಿಂಗ್ಟನ್ ವಂದಿಸಿದರು. ಪ್ರೊ. ರೋಹನ್ ಫರ್ನಾಂಡಿಸ್ ನಿರೂಪಿಸಿದರು.
ವಿಶ್ವವಿದ್ಯಾಲಯದ ಸಹಕುಲಸಚಿವೆ ಡಾ. ಜಯಶ್ರೀ ಬೋಳಾರ್, ಸಂಶೋಧನಾ ವಿಭಾಗದ ನಿರ್ದೇಶಕ ಡಾ. ಪ್ರವೀಣ್ ಬಿ.ಎಂ., ಸಹಸಂಚಾಲಕ ಡಾ. ನವೀನ್ ಕುಮಾರ್ ಜೆ.ಆರ್., ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ. ಪಾವನಾ ಕೃಷ್ಣಮೂರ್ತಿ, ನರ್ಸಿಂಗ್ ವಿಜ್ಞಾನ ಸಂಸ್ಥೆಯ ಮುಖ್ಯಸ್ಥೆ ಡಾ. ಜುಬಿ ಮೇರಿ ಚಾಕೋ, ಎಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ, ರಾಜ್ಯದ ವಿವಿಧ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.


