ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಮತ್ತು ಬರವಣಿಗೆಯಲ್ಲಿ 36 ವರ್ಷಗಳಿಂದ ನಿರಂತರವಾಗಿ ತೊಡಗಿಸಿಕೊಂಡಿರುವ ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ‘ಕರಾವಳಿ ಸಾಧಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ವತಿಯಿಂದ ಆಯೋಜಿಸಲಾಗಿರುವ 9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026 ಹಾಗೂ ಕೇರಳ-ಕರ್ನಾಟಕ ಸಾಹಿತ್ಯ ಉತ್ಸವದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಷ್ಠಾನವು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದೆ.
ನ.29ರಂದು ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36 ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮ ಮತ್ತು ಬರವಣಿಗೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಅವಧಿಯಲ್ಲಿ 4,500ಕ್ಕೂ ಅಧಿಕ ಕ್ರೀಡಾ ಲೇಖನಗಳು ಹಾಗೂ ಅಂಕಣ ಬರಹಗಳನ್ನು ರಚಿಸಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿರುವ ನಿರಂತರ ಕೊಡುಗೆಯನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.


