ಮಂಗಳೂರು: ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಸಾಧನೆಯೊಂದಕ್ಕೆ ಸಾಕ್ಷಿಯಾಗಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮೊದಲ ಬಾರಿಗೆ ರೋಬೋಟಿಕ್ ಸೆಂಟ್ರಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ನಡೆದ ಈ ಅಪರೂಪದ ಶಸ್ತ್ರಚಿಕಿತ್ಸೆಯ ಕುರಿತು ಮಾಹಿತಿ ನೀಡಿದ ಅವರು, 22 ವರ್ಷದ ಯುವತಿ ಮೇದೋಜೀರಕ ಗ್ರಂಥಿಯ ಮಧ್ಯಭಾಗದಲ್ಲಿ ಗಡ್ಡೆ ಪತ್ತೆಯಾಗಿತ್ತು. ಈ ಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆಸುವುದು ಅತ್ಯಂತ ಸವಾಲಿನ ಕೆಲಸವಾಗಿದ್ದು, ವಿಶೇಷ ಪರಿಣತಿ ಮತ್ತು ನಿಖರತೆಯ ಅಗತ್ಯವಿರುತ್ತದೆ. ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನದ ನೆರವಿನಿಂದ ವೈದ್ಯಕೀಯ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದೆ ಎಂದರು.
ಆಸ್ಪತ್ರೆ ಶಸ್ತ್ರಚಿಕಿತ್ಸಾ ಜೀರ್ಣಾಂಗವ್ಯೂಹ ವಿಭಾಗದ ತಜ್ಞ ವೈದ್ಯ ಡಾ. ರೋಹನ್ ಶೆಟ್ಟಿ ಮತ್ತು ಡಾ. ಅಶ್ವಿನ್ ಆಳ್ವ ಅವರು, ಅರಿವಳಿಕೆ ತಜ್ಞ ಡಾ. ಹರೀಶ್ ಕಾರಂತ ಅವರ ತಂಡದ ನೆರವಿನಿಂದ ಶಸ್ತ್ರಚಿಕಿತ್ಸೆ ನಡೆಸಿದರು. ಈ ಶಸ್ತ್ರಚಿಕಿತ್ಸೆಯಲ್ಲಿ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದು ಹಾಕುವುದರ ಜತೆಗೆ ಮೇದೋಜೀರಕ ಗ್ರಂಥಿಯ ಬಹುಪಾಲು ಆರೋಗ್ಯಕರ ಭಾಗವನ್ನು ಉಳಿಸಿಕೊಳ್ಳಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಧುಮೇಹ ಉಂಟಾಗುವ ಸಾಧ್ಯತೆ ಹಾಗೂ ಆಹಾರ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆಗಳ ಅಪಾಯವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಯ ಬಳಿಕ ಯುವತಿ ಯಾವುದೇ ತೊಂದರೆಗಳಿಲ್ಲದೆ ಶೀಘ್ರವಾಗಿ ಚೇತರಿಸಿಕೊಂಡಿದ್ದು, ಒಂದು ವಾರದೊಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿಯೂ ರೋಗಿಯ ಆರೋಗ್ಯಕರ ಅಂಗಾಂಶಗಳನ್ನು ಸಾಧ್ಯವಾದಷ್ಟು ಉಳಿಸಿಕೊಳ್ಳಲು ಈ ಅತ್ಯಾಧುನಿಕ ತಂತ್ರಜ್ಞಾನ ನೆರವಾಗಿದೆ ಎಂದು ತಿಳಿಸಿದ್ದಾರೆ.
ಒಂದು ದಶಕದಲ್ಲಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಜೀರ್ಣಾಂಗವ್ಯೂಹ ವಿಭಾಗವು ಗಮನಾರ್ಹ ಪ್ರಗತಿ ಸಾಧಿಸಿದೆ. ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಬಳಸಿ ಸಂಕೀರ್ಣ ಕ್ಯಾನ್ಸರ್ ಹಾಗೂ ಗಡ್ಡೆಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವುದು ವೈದ್ಯಕೀಯ ತಂಡದ ಪರಿಣತಿ, ನಿಖರತೆ ಮತ್ತು ಗುಣಮಟ್ಟದ ಚಿಕಿತ್ಸಾ ಸೇವೆ ನೀಡುವ ಬದ್ಧತೆಗೆ ಸಾಕ್ಷಿಯಾಗಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದ ರೋಗಿಗಳಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆ ನಿರಂತರವಾಗಿ ಶ್ರಮಿಸುತ್ತಿದೆ. ಈ ಸಾಧನೆಯು ಎ.ಜೆ. ಆಸ್ಪತ್ರೆಯ ವೈದ್ಯಕೀಯ ತಂಡದ ಪರಿಣತಿ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳಿಗೆ ಮತ್ತೊಂದು ಮಹತ್ವದ ಮೈಲುಗಲ್ಲು ಎಂದರು.


